ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 10 ಮಂದಿ ಬಾಂಗ್ಲಾದೇಶದ ಪ್ರಜೆಗಳ ಜೈಲು ಶಿಕ್ಷೆಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಸ್ವದೇಶಕ್ಕೆ ಗಡಿಪಾರು ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
2024ರ ಅಕ್ಟೋಬರ್ 11ರಂದು ವಡಬಾಂಡೇಶ್ವರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಕಂಡುಬಂದಿದ್ದ 10 ಮಂದಿಯನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಅವರು ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವುದು ಪತ್ತೆಯಾಗಿತ್ತು. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 2025ರ ಡಿಸೆಂಬರ್ 8ರಂದು ಆರೋಪಿಗಳಿಗೆ ತಲಾ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿತ್ತು.
ಅವರ ಶಿಕ್ಷೆಯ ಅವಧಿಯು 2026ರ ಅಕ್ಟೋಬರ್ 10ರಂದು ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಹಾಗೂ ಬೆಂಗಳೂರಿನ ಪ್ರಾದೇಶಿಕ ವಿದೇಶಿಯರ ನೋಂದಣಾಧಿಕಾರಿಗಳ ಆದೇಶದಂತೆ ಗಡಿಪಾರು ಪ್ರಕ್ರಿಯೆ ಆರಂಭಿಸಲಾಗಿದೆ.
ಅದರಂತೆ 10 ಮಂದಿಯನ್ನು ಪೊಲೀಸ್ ಭದ್ರತೆಯಲ್ಲಿ ನವೆಂಬರ್ 23ರಂದು ಉಡುಪಿಯಿಂದ ರೈಲಿನ ಮೂಲಕ ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಕರೆದೊಯ್ಯಲಾಗಿದೆ. ಅಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಅಧಿಕಾರಿಗಳ ಮುಂದೆ ಹಾಜರುಪಡಿಸಿ, ಭಾರತದಿಂದ ಗಡಿಪಾರು ಮಾಡುವ ಮುಂದಿನ ಕಾನೂನು ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ.

