ಮೈಸೂರು : ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು, ಇದೀಗ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತ ವಿದ್ಯಾರ್ಥಿಯನ್ನು ಮಾದೇಶ್ ಎಂದು ಗುರುತಿಸಲಾಗಿದೆ. ಅವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಿವಾಸಿಯಾಗಿದ್ದು, ಪ್ರಸ್ತುತ ಮೈಸೂರಿನಲ್ಲಿ ತಮ್ಮ ಅಕ್ಕನೊಂದಿಗೆ ವಾಸವಿದ್ದು ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.
ಎಂದಿನಂತೆ ಕಾಲೇಜಿಗೆ ಆಗಮಿಸಿದ್ದ ಮಾದೇಶ್, ಕಾಲೇಜು ಕ್ಯಾಂಪಸ್‌ನಲ್ಲಿದ್ದ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿ ಕುಸಿದುಬಿದ್ದಿದ್ದಾರೆ. ಘಟನೆ ಕಂಡ ಕಾಲೇಜು ಸಿಬ್ಬಂದಿ ಹಾಗೂ ಸಹಪಾಠಿಗಳು ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮಾದೇಶ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

