ಮಣಿಪಾಲ : ಇಲ್ಲಿನ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಕಾಲೇಜಿನ ಮಹಿಳಾ ಹಾಸ್ಟೆಲ್ನಲ್ಲಿ ಬಿ.ಟೆಕ್ ಮೂರನೇ ವರ್ಷದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. 21 ವರ್ಷದ ಶ್ರೀಯಾ ಪರ್ಗಿ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಶ್ರೀಯಾ ಅವರು ಕಾಲೇಜಿನ ಮಹಿಳಾ ಹಾಸ್ಟೆಲ್ನ ನಾಲ್ಕನೇ ಮಹಡಿಯ 434ನೇ ಕೊಠಡಿಯಲ್ಲಿ ಮತ್ತೊಬ್ಬ ವಿದ್ಯಾರ್ಥಿನಿಯೊಂದಿಗೆ ವಾಸವಾಗಿದ್ದರು. ಆದರೆ, ಘಟನೆ ನಡೆದ ಸಂದರ್ಭದಲ್ಲಿ ಸಹ ಕೊಠಡಿ ವಿದ್ಯಾರ್ಥಿನಿ ರಜೆಯಲ್ಲಿದ್ದರು ಎನ್ನಲಾಗಿದೆ.
ನವೆಂಬರ್ 10ರಂದು ರಾತ್ರಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸಿ ತಮ್ಮ ಕೊಠಡಿಗೆ ತೆರಳಿದ್ದ ಶ್ರೀಯಾ, ಮರುದಿನ ಮೊಬೈಲ್ ಕರೆಗಳಿಗೆ ಪ್ರತಿಕ್ರಿಯಿಸಿರಲಿಲ್ಲ. ಅಲ್ಲದೆ, ಕೊಠಡಿಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಇದರಿಂದ ಅನುಮಾನಗೊಂಡ ಕೇರ್ಟೇಕರ್ ಶಾಲಿನಿ ಶೆಟ್ಟಿ ಅವರು ಸ್ಪೇರ್ ಕೀ ಬಳಸಿ ಬಾಗಿಲು ತೆರೆಯಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.
ನಂತರ ಕ್ಯಾಂಪಸ್ ಪೆಟ್ರೋಲ್ ಸಿಬ್ಬಂದಿಯನ್ನು ಕರೆಸಲಾಗಿದ್ದು, ಅವರ ಸಹಾಯದಿಂದ ಬಾಗಿಲಿನ ಚಿಲಕವನ್ನು ತೆರೆಯಲಾಯಿತು. ಈ ವೇಳೆ ವಿದ್ಯಾರ್ಥಿನಿ ಕೊಠಡಿಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 57/2026ರಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಕಲಂ 194ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ಮುಂದಿನ ತನಿಖೆ ಹಾಗೂ ಕಾನೂನು ಕ್ರಮ ಕೈಗೊಂಡಿದ್ದಾರೆ.
ಈ ಘಟನೆಯಿಂದ ಕಾಲೇಜು ವಲಯದಲ್ಲಿ ಆತಂಕ ಮತ್ತು ದುಃಖದ ವಾತಾವರಣ ನಿರ್ಮಾಣವಾಗಿದೆ. ವಿದ್ಯಾರ್ಥಿನಿಯ ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

