ಚೆನ್ನೈ: ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಇಬ್ಬರು ವ್ಯಕ್ತಿಗಳು ಬುಧವಾರ ಬೆಳಗ್ಗೆ ಅತ್ಯಾಚಾರವೆಸಗಿದ್ದು, ಈ ಸಂಬಂಧ ಕೋತ್ತೂರ್‌ಪುರಂ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ಎಸ್ ಸೆಕ್ಷನ್ 64ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಧ್ಯರಾತ್ರಿ ಸಮೀಪದ ಚರ್ಚ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆ ಮುಗಿಸಿ ಹಿಂದಿರುಗಿದ ನಂತರ ಯುವತಿ ಹಾಗೂ ಆಕೆಯ ಸ್ನೇಹಿತ ಕ್ಯಾಂಪಸ್‌ನಲ್ಲಿ ಒಟ್ಟಿಗೆ ಕುಳಿತಿದ್ದಾಗ ಈ ಘಟನೆ ಸಂಭವಿಸಿದೆ. ಆರೋಪಿಗಳು ಸ್ನೇಹಿತನ ಮೇಲೆ ಹಲ್ಲೆ ನಡೆಸಿ ನಂತರ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಘಟನೆ ಕುರಿತು ಪ್ರತಿಕ್ರಿಯಿಸಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ. ಡಿಎಂಕೆ ಸರ್ಕಾರದಡಿ ತಮಿಳುನಾಡು ಕಾನೂನುಬಾಹಿರ ಚಟುವಟಿಕೆಗಳ ತಾಣವಾಗಿದೆ ಮತ್ತು ಅಪರಾಧಿಗಳ ಆಶ್ರಯ ತಾಣವಾಗಿದೆ. ಇನ್ನು ಮುಂದೆ ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷಿತ ಭಾವನೆ ಇಲ್ಲ, ಏಕೆಂದರೆ ರಾಜ್ಯ ಸರ್ಕಾರ ಪೊಲೀಸರನ್ನು ಬಳಸಿಕೊಂಡು ಪ್ರತಿಪಕ್ಷಗಳನ್ನು ಮೌನಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಆರೋಪಿಸಿದ್ದಾರೆ.