
ಮಂಗಳೂರು : ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯ ಅಂಗವಾಗಿ ಎಸ್ ಸಿ ಎಸ್ ಪ್ರಥಮ ದರ್ಜೆ ಕಾಲೇಜು, ಮಂಗಳೂರು ವತಿಯಿಂದ “ಸ್ವಭಾವ ಸ್ವಚ್ಛತಾ – ಸಂಸ್ಕಾರ ಸ್ವಚ್ಛತಾ” ಎಂಬ ಆಶಯದೊಂದಿಗೆ ವಿವಿಧ ಸ್ವಚ್ಛತಾ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಅಕ್ಟೋಬರ್ 2, 2026 ರಂದು ಹಮ್ಮಿಕೊಳ್ಳಲಾಯಿತು.
ಕಾಲೇಜಿನ ವಿದ್ಯಾರ್ಥಿ ಕಲ್ಯಾಣ ಮಂಡಳಿ ,ರಾಷ್ಟ್ರೀಯ ಸೇವಾ ಯೋಜನೆ , ಯೂತ್ ರೆಡ್ ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಹಯೋಗದಲ್ಲಿ ಕಾರ್ಯಕ್ರಮಗಳು ನಡೆದವು.

ಸ್ವಚ್ಛತಾ ಹಿ ಸೇವಾ
ಗಾಂಧೀಜಿ ಜಯಂತಿಯ ಅಂಗವಾಗಿ ಬೆಳಿಗ್ಗೆ 8 ರಿಂದ 9 ರವರೆಗೆ ವಿವಿಧ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ನಡೆಸಲಾಯಿತು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಮಂಗಳೂರಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿ, ಸಂಗ್ರಹಿಸಿದ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯದಿರುವುದು, ಕಸದ ಬುಟ್ಟಿಗಳನ್ನು ಬಳಸುವುದು ಹಾಗೂ ನೈರ್ಮಲ್ಯ ಕಾಪಾಡಿಕೊಳ್ಳುವ ಕುರಿತು ಜಾಗೃತಿ ಮೂಡಿಸಲಾಯಿತು.
ಅದೇ ಸಂದರ್ಭದಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿ ಗಾಂಧಿನಗರದ ಗಾಂಧೀ ಪಾರ್ಕ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. ಪಾರ್ಕ್ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು.

ಇದರೊಂದಿಗೆ ವಿದ್ಯಾರ್ಥಿ ಕಲ್ಯಾಣ ಮಂಡಳಿಯ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಯೂ ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ ವಿವಿಧ ಪ್ರದೇಶಗಳನ್ನು ಸ್ವಚ್ಛಗೊಳಿಸಿದರು. ಈ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ, ಶಿಸ್ತು, ಸಾಮಾಜಿಕ ಹೊಣೆಗಾರಿಕೆ ಹಾಗೂ ಸಮುದಾಯ ಸೇವೆಯ ಮನೋಭಾವವನ್ನು ಬೆಳೆಸುವ ಸಂದೇಶ ನೀಡಲಾಯಿತು.ಬೆಳಿಗ್ಗೆ 9.30ಕ್ಕೆ ಕಾಲೇಜಿನ ಪ್ರವೇಶದ್ವಾರದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದ ಗೌರವಾರ್ಥವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುಧೀರ್ ಪೈ ಎಂ.ಭಾರತೀಯ ನೌಕಾಪಡೆ ಹಾಗೂ , ದಕ್ಷಿಣ ಕನ್ನಡ ಮಾಜಿ ಸೈನಿಕರ ಸಂಘ, ಮಂಗಳೂರು, ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣದ ನಂತರ ಮುಖ್ಯ ಅತಿಥಿ, ಗಣ್ಯರು, ಪ್ರಾಂಶುಪಾಲರು, ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಎಲ್ಲರೂ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭಾ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ಅವರ ದೇಶಸೇವೆ, ಸರಳತೆ, ತ್ಯಾಗ ಹಾಗೂ ಆದರ್ಶಗಳನ್ನು ಗೌರವಪೂರ್ವಕವಾಗಿ ಸ್ಮರಿಸಲಾಯಿತು.
ಬಳಿಕ ಅತಿಥಿಗಳಾದ ಸುಧೀರ್ ಪೈ ಎಂ. ಅವರು ಮಾತನಾಡಿ, ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ, ಪ್ರಾಮಾಣಿಕತೆ, ದೇಶಸೇವೆ ಹಾಗೂ ತ್ಯಾಗದ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಸ್ವಚ್ಛತೆ ಕೇವಲ ಒಂದು ದಿನದ ಕಾರ್ಯಕ್ರವಾಗದೆ ಪ್ರತಿಯೊಬ್ಬರ ದೈನಂದಿನ ಜೀವನದ ಭಾಗವಾಗಬೇಕು ಎಂದು ತಿಳಿಸಿದರು. ಸ್ವಚ್ಛ ಭಾರತ ಅಭಿಯಾನದ ಆಶಯವನ್ನು ವಿವರಿಸಿ, ಸ್ವಚ್ಛ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬ ನಾಗರಿಕನ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
ಲಾಲ್ ಬಹದ್ದೂರ್ ಶಾಸ್ತ್ರಿಯವರ “ಜೈ ಜವಾನ್, ಜೈ ಕಿಸಾನ್” ಘೋಷವಾಕ್ಯವನ್ನು ಉಲ್ಲೇಖಿಸಿದ ಅವರು, ದೇಶದ ರಕ್ಷಣೆಯಲ್ಲಿ ಸೈನಿಕರು ಹಾಗೂ ದೇಶದ ಆಹಾರ ಭದ್ರತೆಯಲ್ಲಿ ರೈತರ ಮಹತ್ವವನ್ನು ವಿವರಿಸಿದರು. ಭಾರತೀಯ ಸಶಸ್ತ್ರ ಪಡೆಗಳಲ್ಲಿ ವಿವಿಧ ತಾಂತ್ರಿಕ ಹಾಗೂ ವೃತ್ತಿಪರ ಕ್ಷೇತ್ರಗಳಲ್ಲಿಯೂ ಅವಕಾಶಗಳಿದ್ದು, ವಿದ್ಯಾರ್ಥಿಗಳು ಅಂತಹ ಅವಕಾಶಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಹಾರ್ದಿಕ್ ಪಿ. ಚೌಹಾಣ್ ಅವರು ಅಧ್ಯಕ್ಷೀಯ ಭಾಷಣ ಮಾಡಿದರು. ಗಾಂಧೀಜಿ ಮತ್ತು ಶಾಸ್ತ್ರಿಜಯಂತಯು ನಿಸ್ವಾರ್ಥ ಸೇವೆ, ಸರಳತೆ, ಶಿಸ್ತು ಹಾಗೂ ದೇಶದ ಮೇಲಿನ ಜವಾಬ್ದಾರಿಯನ್ನು ನೆನಪಿಸುವ ದಿನಗಳಾಗಿವೆ ಎಂದು ಹೇಳಿದರು. ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಆದರ್ಶಗಳನ್ನು ಕೇವಲ ಭಾಷಣ ಹಾಗೂ ಪುಷ್ಪನಮಗಳಿಗೆ ಸೀಮಿತಗೊಳಿಸದೆ, ಅವುಗಳನ್ನು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಹಾಗೂ ವಿದ್ಯಾರ್ಥಿ ಕಲ್ಯಾಣ ಮಾರ್ಗದರ್ಶಕಿ ಮಧುಮತಿ ಜೆ. ರಾಜಾ ಅವರು ಸ್ವಚ್ಛತಾ ಪ್ರತಿಜ್ಞೆಯನ್ನು ಬೋಧಿಸಿದರು. ನಂತರ “ವೈಷ್ಣವ ಜನ ತೋ ತೆನೆ ಕಹಿಯೇ…” ಗೀತೆಯನ್ನು ಕುಮಾರಿ ಶಮಾ ಕೆ. ಮತ್ತು ತಂಡದವರು ಪ್ರಸ್ತುತಪಡಿಸಿದರು.
ಕಾರ್ಯಕ್ರಮವನ್ನು ವಿದ್ಯಾರ್ಥಿ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಕುಮಾರಿ ಶ್ರಾವ್ಯ ಜೆ.ಎಸ್. ಅವರು ನಿರೂಪಿಸಿದರು. ವಿದ್ಯಾರ್ಥಿ ಕಲ್ಯಾಣ ಮಂಡಳಿಯ ಅಧ್ಯಕ್ಷೆ ಕುಮಾರಿ ಸಾನ್ವಿ ಎಂ.ಎಸ್. ಅವರು ಸ್ವಾಗತ ಭಾಷಣ ಮಾಡಿದರು. ದ್ವಿತೀಯ ಬಿ ಸಿ ಎ ವಿದ್ಯಾರ್ಥಿ ಭೂಷಣ್ ಶೆಟ್ಟಿ ಅವರು ವಂದನಾರ್ಪಣೆ ಸಲ್ಲಿಸಿದರು. “ವಂದೇ ಮಾತರಂ” ಗೀತೆಯೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.
