ಸಂತೆಕಟ್ಟೆ ಸರ್ವಿಸ್ ರಸ್ತೆಯ ಹೊಂಡಗಳಿಗೆ ತಾತ್ಕಾಲಿಕ ಮುಕ್ತಿ : ಸತೀಶ್ ಪೂಜಾರಿ ಕೀಳಂಜೆ ಮನವಿಗೆ ಸ್ಪಂದನೆ

0
7

ಉಡುಪಿ: ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಮೇಲ್ಭಾಗದಲ್ಲಿರುವ ಸರ್ವಿಸ್ ರಸ್ತೆಯ ಬದಿಯಲ್ಲಿ ನಿರ್ಮಾಣವಾಗಿದ್ದ ಹೊಂಡಗುಂಡಿಗಳು ಹಾಗೂ ಕೆಸರುಮಯ ಸ್ಥಿತಿಯಿಂದಾಗಿ ವಾಹನ ಸವಾರರು ಎದುರಿಸುತ್ತಿದ್ದ ಸಮಸ್ಯೆಗೆ ಇದೀಗ ತಾತ್ಕಾಲಿಕ ಪರಿಹಾರ ದೊರೆತಿದೆ. ಸಾಮಾಜಿಕ ಕಾರ್ಯಕರ್ತ ಹಾಗೂ ಸಮಾಜಸೇವಕ ಸತೀಶ್ ಪೂಜಾರಿ ಕೀಳಂಜೆ ಅವರ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಸ್ತೆಯ ಹೊಂಡಗಳನ್ನು ಜಲ್ಲಿಕಲ್ಲು ಮಿಶ್ರಣದಿಂದ ಮುಚ್ಚಿ ಸಮತಟ್ಟು ಮಾಡುವ ಕಾಮಗಾರಿ ಕೈಗೊಂಡಿದೆ.

ಸಂತೆಕಟ್ಟೆ ಜಂಕ್ಷನ್‌ನಿಂದ ಮಲ್ಪೆ ಸಂಪರ್ಕಿಸುವ ರಸ್ತೆಯವರೆಗಿನ ಸರ್ವಿಸ್ ರಸ್ತೆಯ ಬದಿಯಲ್ಲಿ ಹಲವೆಡೆ ಹೊಂಡಗುಂಡಿಗಳು ನಿರ್ಮಾಣವಾಗಿದ್ದು, ಮಳೆ ಹಾಗೂ ವಾಹನ ಸಂಚಾರದಿಂದ ರಸ್ತೆ ಕೆಸರುಮಯವಾಗಿತ್ತು. ಇದರಿಂದ ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ರಸ್ತೆಯಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ರಸ್ತೆಯ ದುಸ್ಥಿತಿಯಿಂದ ಅಪಘಾತಗಳ ಆತಂಕವೂ ಎದುರಾಗಿತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದರು.

ಈ ಸಮಸ್ಯೆಯನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ ಅವರ ಗಮನಕ್ಕೆ ತಂದಿದ್ದರು. ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿದ ಅವರು, ರಸ್ತೆಯ ದುಸ್ಥಿತಿಯ ಕುರಿತು ಪತ್ರಿಕೆಗಳಲ್ಲಿ ವರದಿ ಪ್ರಕಟವಾಗುವಂತೆ ಮಾಡಿ, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೂ ಸಮಸ್ಯೆಯನ್ನು ತಂದಿದ್ದರು. ಸಾರ್ವಜನಿಕರ ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದ ಈ ಸಮಸ್ಯೆಯನ್ನು ಕೂಡಲೇ ಪರಿಹರಿಸುವಂತೆ ಅವರು ಆಗ್ರಹಿಸಿದ್ದರು.

ಇದಕ್ಕೆ ಸ್ಪಂದಿಸಿದ ಸಂಬಂಧಪಟ್ಟ ಅಧಿಕಾರಿಗಳು ಇದೀಗ ಸರ್ವಿಸ್ ರಸ್ತೆಯ ಬದಿಯ ಹೊಂಡಗುಂಡಿಗಳಿಗೆ ಜಲ್ಲಿಕಲ್ಲು ಮಿಶ್ರಣ ಹಾಕಿ, ರಸ್ತೆಯ ಮಟ್ಟಕ್ಕೆ ಸಮತಟ್ಟು ಮಾಡುವ ಕಾರ್ಯ ಕೈಗೊಂಡಿದ್ದಾರೆ. ಇದರಿಂದ ವಾಹನ ಸವಾರರಿಗೆ ಸ್ವಲ್ಪಮಟ್ಟಿನ ಅನುಕೂಲವಾಗಿದ್ದು, ಸ್ಥಳೀಯರು ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಯಾವುದೇ ಫಲಾಪೇಕ್ಷೆಯಿಲ್ಲದೆ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಸತೀಶ್ ಪೂಜಾರಿ ಕೀಳಂಜೆ ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಶಾಶ್ವತ ಡಾಂಬರೀಕರಣಕ್ಕೆ ಆಗ್ರಹ

ಸದ್ಯ ಹೊಂಡಗುಂಡಿಗಳನ್ನು ಜಲ್ಲಿಕಲ್ಲು ಹಾಕಿ ಮುಚ್ಚಿರುವುದರಿಂದ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಅನುಕೂಲವಾಗಬಹುದು. ಆದರೆ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ವಿಸ್ ರಸ್ತೆಯ ಬದಿಯಲ್ಲಿ ಕೂಡಲೇ ಗುಣಮಟ್ಟದ ಡಾಂಬರೀಕರಣ ಕಾಮಗಾರಿ ಕೈಗೊಳ್ಳಬೇಕು ಎಂದು ಸತೀಶ್ ಪೂಜಾರಿ ಕೀಳಂಜೆ ಅವರು ಸಾರ್ವಜನಿಕರ ಪರವಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.