ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗಂಜಾಂ ಜಿಲ್ಲೆಯ ಲಡ್ಕಪಲ್ಲಿ ಛಕ್ ಸಮೀಪ, ಪುರುಷೋತ್ತಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ನುವಾಗಾಂವ್ ಪೊಲೀಸ್ ವ್ಯಾಪ್ತಿಯ ಎರೇಂದ್ರ ಗ್ರಾಮದ ಸುಮಾರು 10 ಮಂದಿ ಸಿಂಘಸಾನಿ ದೇಗುಲಕ್ಕೆ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಬಸ್ ಆಟೋಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ಬಸ್ ಆಟೋ ರಿಕ್ಷಾವನ್ನು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿದೆ ಎಂದು ತಿಳಿದುಬಂದಿದೆ.
ಅಪಘಾತದ ಬಳಿಕ ಆಟೋದಲ್ಲಿದ್ದ ಎಲ್ಲ ಪ್ರಯಾಣಿಕರೂ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಕೊಡಾಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

