
ಮಂಗಳೂರು : ಎಸ್.ಸಿ.ಎಸ್. ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರಕವಿ ಗೋವಿಂದ ಪೈ ಅವರ ೧೪೩ನೇ ವರ್ಷದ ಜನ್ಮದಿನಾಚರಣೆಯನ್ನು ೨೩ ಮಾರ್ಚ್ ೨೦೨೬ ಸೋಮವಾರದಂದು ಕಾಲೇಜಿನ ನೂತನ ಸಭಾಭವನದಲ್ಲಿ ಪ್ರಥಮ ಕಾರ್ಯಕ್ರಮವಾಗಿ ಗೌರವಪೂರ್ವಕವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾರ್ಥನೆ ಹಾಗೂ ಸಂಸ್ಥೆಯ ಗೀತೆಯೊಂದಿಗೆ ಚಾಲನೆ ನೀಡಲಾಯಿತು. ನಂತರ ರಾಷ್ಟ್ರಕವಿ ಗೋವಿಂದ ಪೈ ಅವರ ಭಾವಚಿತ್ರಕ್ಕೆ ವೇದಿಕೆಯಲ್ಲಿ ಆಸೀನರಾಗಿದ್ದ ಅತಿಥಿಗಳು ಹಾಗೂ ಗಣ್ಯ ವ್ಯಕ್ತಿಗಳು ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.
ಬಳಿಕ ಕನ್ನಡ ವಿಭಾಗದ ಮುಖ್ಯಸ್ಥರಾದ ಸುಚಿತ್ರಾ ಪಿ. ಶೆಟ್ಟಿ ಅವರು ಪ್ರಸ್ತಾವಿಕ ಭಾಷಣ ಮಾಡಿದರು. ತಮ್ಮ ಭಾಷಣದಲ್ಲಿ ರಾಷ್ಟ್ರಕವಿ ಗೋವಿಂದ ಪೈ ಅವರು ಬಹುಭಾಷಾ ಪಂಡಿತರಾಗಿದ್ದು, ಕನ್ನಡ ನಾಡು, ನುಡಿ, ಸಂಸ್ಕೃತಿ, ಇತಿಹಾಸ ಮತ್ತು ಮಾನವೀಯ ಮೌಲ್ಯಗಳನ್ನು ತಮ್ಮ ಸಾಹಿತ್ಯದಲ್ಲಿ ಅರ್ಥಪೂರ್ಣವಾಗಿ ಪ್ರತಿಬಿಂಬಿಸಿದ ಮಹಾನ್ ಕವಿ, ಚಿಂತಕ ಮತ್ತು ಸಂಶೋಧಕರಾಗಿದ್ದರು ಎಂದು ಹೇಳಿದರು. ಅವರ ಸಾಹಿತ್ಯವು ಕನ್ನಡ ಸಾಹಿತ್ಯ ಲೋಕಕ್ಕೆ ಅಮೂಲ್ಯವಾದ ಕೊಡುಗೆಯಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಸಾಹಿತ್ಯ ಓದುವ ಅಭ್ಯಾಸವನ್ನು ಬೆಳೆಸಿಕೊಂಡು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ. ಆಶಾಲತಾ ಅವರು ಮಾತನಾಡಿ, ರಾಷ್ಟ್ರಕವಿ ಗೋವಿಂದ ಪೈ ಅವರ ಸಾಹಿತ್ಯದಲ್ಲಿ ದೇಶಪ್ರೇಮ, ಸಂಸ್ಕೃತಿ, ಇತಿಹಾಸ ಮತ್ತು ಮಾನವೀಯ ಮೌಲ್ಯಗಳು ತುಂಬಿಕೊಂಡಿದ್ದು, ಅವರ ಕೃತಿಗಳು ಇಂದಿನ ಪೀಳಿಗೆಗೂ ದಾರಿದೀಪವಾಗಿವೆ ಎಂದು ಹೇಳಿದರು. ವಿದ್ಯಾರ್ಥಿಗಳು ಅವರ ಸಾಹಿತ್ಯವನ್ನು ಅಧ್ಯಯನ ಮಾಡಿ ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಸಾಹಿತ್ಯ ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವ ಶಕ್ತಿ ಹೊಂದಿದೆ ಎಂದು ಅವರು ಅಭಿಪ್ರಾಯಪಟ್ಟರು.
ನಂತರ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಹಾರ್ದಿಕ್ ಪಿ. ಚೌಹಾಣ್ ಅವರು ಸಾಂದರ್ಭಿಕವಾಗಿ ಮಾತನಾಡಿ, ಮಹಾನ್ ಕವಿಗಳ ಜೀವನ ಸಾಧನೆಗಳು ವಿದ್ಯಾರ್ಥಿಗಳಿಗೆ ಆದರ್ಶವಾಗಬೇಕು ಎಂದು ಹೇಳಿದರು. ಇಂತಹ ಮಹಾನ್ ವ್ಯಕ್ತಿಗಳ ಜನ್ಮದಿನಾಚರಣೆಯನ್ನು ಆಚರಿಸುವುದರಿಂದ ವಿದ್ಯಾರ್ಥಿಗಳಿಗೆ ಅವರ ಜೀವನ ಮೌಲ್ಯಗಳು ತಿಳಿಯುತ್ತವೆ ಎಂದು ಹೇಳಿದರು. ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು ಮತ್ತು ಸಾಧನೆ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿಯಾದ ಯು. ಕೆ. ಖಾಲಿದ್ ಅವರು ಅಧ್ಯಕ್ಷೀಯ ನುಡಿಯಲ್ಲಿ ಮಾತನಾಡಿ, ರಾಷ್ಟ್ರಕವಿ ಗೋವಿಂದ ಪೈ ಅವರು ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹತ್ವವನ್ನು ತಮ್ಮ ಸಾಹಿತ್ಯದ ಮೂಲಕ ಜನರಿಗೆ ತಿಳಿಸಿದ ಮಹಾನ್ ಕವಿ ಎಂದು ಹೇಳಿದರು. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಜನತೆಯ ಮೇಲಿದೆ ಎಂದು ಹೇಳಿದರು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿಮಾನವನ್ನು ಬೆಳೆಸುತ್ತವೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ಅತಿಥಿಗಳಿಗೆ ಸಸಿಯನ್ನು ನೀಡಿ ಸ್ವಾಗತಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಅತಿಥಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರವೇಶಾಧಿಕಾರಿ ಯಶ್ವಿನ್, ಗ್ರಂಥಪಾಲಕರಾದ ಹೇಮಾವತಿ, ವಿದ್ಯಾರ್ಥಿ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು. ರಾಷ್ಟ್ರಕವಿ ಗೋವಿಂದ ಪೈ ಅವರು ರಚಿಸಿದ ಕನ್ನಡ ನಾಡು ನುಡಿಗೆ ಸಂಬಂಧಿಸಿದ “ತಾಯೆ ಬಾರ ಮೊಗವ ತೋರೆ” ಎಂಬ ಗೀತೆಯನ್ನು ವಿದ್ಯಾರ್ಥಿಗಳು ಸಮೂಹವಾಗಿ ಸುಮಧುರವಾಗಿ ಹಾಡಿದರು.ಪ್ರಥಮ ವಾಣಿಜ್ಯ ಪದವಿ ವಿದ್ಯಾರ್ಥಿನಿ ಮೇಘ ಅವರು ಸ್ವಾಗತಿಸಿದರು. ದ್ವಿತೀಯ ವಾಣಿಜ್ಯ ಪದವಿ ವಿದ್ಯಾರ್ಥಿನಿ ಮೋಕ್ಷಿತ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವನ್ನು ಪ್ರಥಮ ಬಿ.ಎಸ್.ಸಿ. ಎಫ್.ಎನ್.ಡಿ ವಿದ್ಯಾರ್ಥಿನಿ ಗಗನಶ್ರೀ ಅವರು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.
ನಂತರ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಮಾಪ್ತಿಯಾಯಿತು.

