ಗಾಯಾಳುವಿನ ಆರೋಗ್ಯ ವಿಚಾರಿಸಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್
ಹುಬ್ಬಳ್ಳಿ : ಹುಬ್ಬಳ್ಳಿಯ ಸದರಸೋಪಾ ಓಣಿಯಲ್ಲಿ ಪ್ರೀತಿ ವಿಚಾರಕ್ಕೆ ಸಂಬಂಧಿಸಿದ ಗಲಾಟೆಯೊಂದರಲ್ಲಿ ಯುವಕನೋರ್ವನಿಗೆ ಚಾಕು ಇರಿತವಾದ ಘಟನೆ ನಡೆದಿದೆ. ಗೌಸ್ ಮೊಯಿನುದ್ದೀನ್ ಎಂಬ ಯುವಕನಿಗೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಲಾಗಿದ್ದು, ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೌಸ್ ಮೊಯಿನುದ್ದೀನ್ ಸ್ಥಳೀಯ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿ ಯುವತಿಯ ಚಿಕ್ಕಪ್ಪನಾದ ವಸೀಂ ಕುಪಿತಗೊಂಡು ನಮ್ಮ ಮನೆ ಹುಡುಗಿಯನ್ನ ಪ್ರೀತಿಸುತ್ತೀಯಾ ಎಂದು ಗೌಸ್‌ನ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಯುವತಿಯೇ ಗೌಸ್‌ಗೆ ಫೋನ್ ಮಾಡಿ ಸದರಸೋಪಾ ಓಣಿಗೆ ಕರೆಸಿದ್ದಳು ಎನ್ನಲಾಗಿದ್ದು, ಆಕೆಯ ಮಾತನ್ನು ನಂಬಿ ಬಂದ ಗೌಸ್‌ನ ಮೇಲೆ ಈ ದಾಳಿ ನಡೆದಿದೆ. ಗಾಯಗೊಂಡ ಗೌಸ್‌ನನ್ನು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ. ಆರೋಪಿಗಳಾದ ವಸೀಂ ಹಾಗೂ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಾಕು ಇರಿತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, ‘ಪ್ರಕರಣದ ಬಗ್ಗೆ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತೇವೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಘಟನೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಶಾಂತಿ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.