ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಹಾಡಹಗಲೇ ಯುವತಿ ಲಾವಣ್ಯ ಅವರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆಯರ ಸುರಕ್ಷತೆ ಕುರಿತು ಗಂಭೀರ ಆತಂಕ ಮೂಡಿಸಿದೆ ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕ ಸ್ಥಳದಲ್ಲೇ ನಡೆದ ಈ ಕೃತ್ಯ ಇಡೀ ಕರಾವಳಿಯನ್ನಷ್ಟೇ ಅಲ್ಲ, ರಾಜ್ಯದ ಜನತೆಯನ್ನೂ ಬೆಚ್ಚಿಬೀಳಿಸಿದೆ. ಮಹಿಳೆಯರು ಸುರಕ್ಷಿತವಾಗಿ ಸಂಚರಿಸುವ ವಾತಾವರಣ ನಿರ್ಮಾಣವಾಗಬೇಕಾದರೆ ಸರ್ಕಾರ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.
“ಈ ಹಿಂದೆಯೂ ಇಂತಹ ಘಟನೆಗಳು ನಡೆದಿವೆ. ತಪ್ಪಿತಸ್ಥರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆಯಾಗದ ಕಾರಣ ಇಂತಹ ಅಪರಾಧಗಳು ಮರುಕಳಿಸುತ್ತಿವೆ. ಯಾವುದೇ ಧರ್ಮ, ಜಾತಿ ಅಥವಾ ಹಿನ್ನೆಲೆಯಾಗಿರಲಿ, ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಯಾಗಬೇಕು. ಅಂತಹ ಶಿಕ್ಷೆ ಮುಂದಿನ ದಿನಗಳಲ್ಲಿ ಯಾರೂ ಇಂತಹ ಕೃತ್ಯಕ್ಕೆ ಮುಂದಾಗದಂತೆ ಎಚ್ಚರಿಕೆಯ ಸಂದೇಶವಾಗಬೇಕು” ಎಂದು ಅವರು ಹೇಳಿದ್ದಾರೆ.
ಕರ್ನಾಟಕದಲ್ಲಿಯೂ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಇನ್ನಷ್ಟು ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸುವಂತೆ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಅಲ್ಲದೆ, ಲಾವಣ್ಯ ಸಾವಿನ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ತಪ್ಪಿತಸ್ಥರಿಗೆ ಶೀಘ್ರ ನ್ಯಾಯಾಲಯದ ಮೂಲಕ ಕಾನೂನುಬದ್ಧ ಶಿಕ್ಷೆ ವಿಧಿಸುವ ಮೂಲಕ ಲಾವಣ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಒತ್ತಾಯಿಸಿದ್ದಾರೆ.

