ಕಾರ್ಕಳ : ಪರಶುರಾಮ ಥೀಂ ಪಾರ್ಕ್‌ನಲ್ಲಿ ಕಳ್ಳತನ ; ತಾಮ್ರದ ಹೊದಿಕೆಗಳು ಕಳವು

0
19

ಕಾರ್ಕಳದ ಪರಶುರಾಮ ಥೀಂ ಪಾರ್ಕ್‌ನಲ್ಲಿ ಕಳ್ಳತನ ಸಂಭವಿಸಿರುವ ಘಟನೆ ಬೆಳಕಿಗೆ ಬಂದಿದೆ. ಅಜ್ಞಾತ ದುಷ್ಕರ್ಮಿಗಳು ಥೀಂ ಪಾರ್ಕ್‌ನ ಬಾಗಿಲು ಒಡೆದು ಒಳನುಗ್ಗಿ ಮೇಲ್ಛಾವಣಿಗೆ ಅಳವಡಿಸಲಾಗಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತು ಕಳ್ಳತನ ನಡೆಸಿದ್ದಾರೆ.

ಈ ಘಟನೆ ಕುರಿತು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇದನ್ನು ಕಾರ್ಕಳದ ಇತಿಹಾಸದಲ್ಲಿನ ದುರ್ದಿನವೆಂದು ಅವರು ವರ್ಣಿಸಿದ್ದಾರೆ. ರಾಜ್ಯದ ಶ್ರೇಷ್ಠ ಪ್ರವಾಸಿ ತಾಣವಾಗಿ ಪರಶುರಾಮ ಥೀಂ ಪಾರ್ಕ್ ಅನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಆರಂಭಗೊಂಡ ಮಹತ್ವಾಕಾಂಕ್ಷಿ ಯೋಜನೆ ಕಳೆದ ಎರಡು ವರ್ಷಗಳಿಂದ ಅನುದಾನ ಬಿಡುಗಡೆಯಾಗದೇ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಆರೋಪಿಸಿದ್ದಾರೆ.

ಯೋಜನೆಯ ಅಭಿವೃದ್ಧಿಗೆ ಅಗತ್ಯವಿದ್ದ ಹಣ ಬಿಡುಗಡೆಯಾಗದ ಕಾರಣ ಥೀಂ ಪಾರ್ಕ್ ನಿರ್ವಹಣೆ ಕೊರತೆಯಿಂದ ಪಾಳುಬಿದ್ದಿದ್ದು, ಇದರ ಪರಿಣಾಮವಾಗಿ ಕಳ್ಳತನದಂತಹ ಘಟನೆಗಳು ನಡೆಯಲು ಅವಕಾಶವಾಗಿದೆ ಎಂದು ಅವರು ಹೇಳಿದ್ದಾರೆ. ಪ್ರವಾಸಿಗರು ಮತ್ತು ವಿದ್ಯಾರ್ಥಿಗಳು ಭೇಟಿ ನೀಡಬೇಕಿದ್ದ ಈ ತಾಣ ಇಂದು ದುಷ್ಕರ್ಮಿಗಳ ಗುರಿಯಾಗಿರುವುದು ದುಃಖಕರ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ಇದಲ್ಲದೆ, ಥೀಂ ಪಾರ್ಕ್‌ಗೆ ಸಾರ್ವಜನಿಕ ಪ್ರವೇಶವನ್ನು ನಿರಾಕರಿಸಿ 2023ರ ಸೆಪ್ಟೆಂಬರ್‌ನಲ್ಲಿ ಸ್ಥಳೀಯ ಆಡಳಿತ ಆದೇಶ ಹೊರಡಿಸಿದ್ದರೂ, ಕೆಲವು ವ್ಯಕ್ತಿಗಳು ಕಾನೂನುಬಾಹಿರವಾಗಿ ಒಳನುಗ್ಗಿ ವಿಡಿಯೋ ಚಿತ್ರೀಕರಣ ನಡೆಸಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ವಿಡಿಯೋ ಚಿತ್ರೀಕರಣ ಮಾಡಿದವರನ್ನೂ ವಿಚಾರಣೆಗೆ ಒಳಪಡಿಸುವ ಜೊತೆಗೆ ಕಳ್ಳತನ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಶಾಸಕ ವಿ. ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.

ಘಟನೆಯ ಕುರಿತು ಸಂಬಂಧಪಟ್ಟ ಇಲಾಖೆಗಳಿಂದ ತನಿಖೆ ಆರಂಭಗೊಂಡಿದ್ದು, ಜಿಲ್ಲಾಡಳಿತದ ಪಾತ್ರದ ಮೇಲೂ ಪ್ರಶ್ನೆಗಳು ಉದ್ಭವಿಸುತ್ತಿವೆ.

LEAVE A REPLY

Please enter your comment!
Please enter your name here