ಕುಶಾಲನಗರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ

0
15

ಕುಶಾಲನಗರ : ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ (ಪಿ.ಎಂ.ಶ್ರೀ. ಜಿ.ಎಂ.ಪಿ. ಶಾಲೆ)ಯಲ್ಲಿ ಎರಡು ದಿನಗಳ ಹಿಂದೆ ಕಳ್ಳತನ ಹಾಗೂ ಶಾಲಾ ಆಸ್ತಿಪಾಸ್ತಿಗೆ ಹಾನಿ ಮಾಡಿರುವ ಘಟನೆ ನಡೆದಿದ್ದು, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‍ಡಿಎಂಸಿ) ಕೃತ್ಯವನ್ನು ತೀವ್ರವಾಗಿ ಖಂಡಿಸಿದೆ.

ಶಾಲೆಯ ಕೊಠಡಿಯ ಬಾಗಿಲನ್ನು ಮುರಿದು ಒಳನುಗ್ಗಿದ ದುಷ್ಕರ್ಮಿಗಳು ಫುಟ್‌ಬಾಲ್‌ಗಳು ಸೇರಿದಂತೆ ಇತರೆ ವಸ್ತುಗಳನ್ನು ಕಳವು ಮಾಡಿದ್ದಾರೆ. ಜೊತೆಗೆ ಶಾಲಾ ಆವರಣದಲ್ಲಿ ಗಿಡ ನೆಡಲು ಇಟ್ಟಿದ್ದ ಸುಮಾರು 10ರಿಂದ 12 ಹೂವಿನ ಕುಂಡಗಳನ್ನು ಒಡೆದು ಹಾನಿಗೊಳಿಸಿದ್ದಾರೆ.

ಮಕ್ಕಳ ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಬಳಕೆಯಾಗಬೇಕಾದ ಶಾಲಾ ಆಸ್ತಿಯನ್ನು ಹಾಳು ಮಾಡಿರುವುದು ಅತ್ಯಂತ ಬೇಸರದ ಸಂಗತಿ. ಇಂತಹ ಕೃತ್ಯಗಳಿಂದ ವಿದ್ಯಾರ್ಥಿಗಳ ಕಲಿಕಾ ವಾತಾವರಣಕ್ಕೆ ಧಕ್ಕೆಯಾಗುವುದಲ್ಲದೆ, ಶಾಲೆಯ ಅಭಿವೃದ್ಧಿ ಕಾರ್ಯಗಳಿಗೂ ತೊಂದರೆಯಾಗುತ್ತದೆ ಎಂದು ಎಸ್‍ಡಿಎಂಸಿ ಅಧ್ಯಕ್ಷ ಚಂದನ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಘಟನೆ ಕುರಿತು ಶಾಲಾ ಆಡಳಿತ ಮಂಡಳಿ ತಕ್ಷಣ ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ, ಕಳ್ಳತನ ಹಾಗೂ ಆಸ್ತಿಪಾಸ್ತಿ ಹಾನಿ ಮಾಡಿದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಒತ್ತಾಯಿಸಿದೆ. ಅಲ್ಲದೆ, ಶಾಲೆಗೆ ಆಗಿರುವ ನಷ್ಟವನ್ನು ಪರಿಶೀಲಿಸಿ, ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಭದ್ರತಾ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ.

ವರದಿ: ಪ್ರಿತುನ್ ಪೂವಣ್ಣ