ಮಂಗಳೂರು : ಸುರತ್ಕಲ್ ಸಮೀಪದ ಮಧ್ಯ ಕೊಡಿಪಾಡಿಯ ಕೋರ್ದಬ್ಬು ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು ಮಾಡಿದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕುಕ್ಕಿಹಳ್ಳಿ ಗ್ರಾಮದ ಬೆಲ್ಲಪ್ಪಳ್ಳಿ ನಿವಾಸಿ ಸುಖೇಶ್ ನಾಯ್ಕ (40) ಬಂಧಿತ ಆರೋಪಿ.
ಆಗಸ್ಟ್ 5ರಂದು ಮುಂಜಾನೆ ಅಪರಿಚಿತ ವ್ಯಕ್ತಿಯೊಬ್ಬ ಕಬ್ಬಿಣದ ಆಯುಧ ಬಳಸಿ ದೈವಸ್ಥಾನದ ಬಾಗಿಲು ಹಾಗೂ ಕಿಟಕಿಯನ್ನು ಮುರಿದು ಒಳನುಗ್ಗಿದ್ದ. ಬಳಿಕ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಸುಮಾರು 15 ಸಾವಿರ ರೂ. ನಗದು ಹಣವನ್ನು ಕಳವು ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಆರೋಪಿ ಆಗಸ್ಟ್ 10ರಂದು ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿರುವ ಬಗ್ಗೆ ಮಾಹಿತಿ ಲಭಿಸಿದೆ. ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಸುಖೇಶ್ ನಾಯ್ಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ದೈವಸ್ಥಾನದಲ್ಲಿ ಕಳವು ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ವಿಚಾರಣೆಯ ವೇಳೆ ಸುಖೇಶ್ ನಾಯ್ಕ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 18 ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಈ ಪೈಕಿ ಒಂದು ಪ್ರಕರಣದಲ್ಲಿ ಶಿಕ್ಷೆಯೂ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದಲ್ಲದೆ, ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿಯ ವಿರುದ್ಧ ದಸ್ತಗಿರಿ ವಾರಂಟ್‌ಗಳು ಇರುವುದಾಗಿಯೂ ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

