ಉಡುಪಿ: ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಲ್ಪಟ್ಟಿರುವ ಪರಶುರಾಮ ಥೀಂ ಪಾರ್ಕ್ ಹಗರಣಕ್ಕೆ ಸಂಬಂಧಿಸಿ ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅಮಾನಾತಾಗಿದ್ದಾರೆ. ಅರುಣ್ ಕುಮಾರ್ ಅವರನ್ನು ಅಮಾನತು ಮಾಡಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಆದೇಶಿಸಿದ್ದಾರೆ.
ತನಿಖಾ ಹಂತದಲ್ಲಿರುವ ಪ್ರಕರಣದಲ್ಲಿ ಅರುಣ್ ಕುಮಾರ್ ಹಸ್ತಕ್ಷೇಪ ಮಾಡುವ ಸಾಧ್ಯತೆಗಳಿರುವುದರಿಂದ, ಅವರನ್ನು ಅಮಾನತು ಮಾಡಲಾಗಿದೆ. ಇವರ ಸ್ಥಾನಕ್ಕೆ ಸಹಾಯ ಯೋಜನಾ ನಿರ್ದೇಶಕ ಪಿ. ದಿವಾಕರ್ ಅವರನ್ನು ನೇಮಿಸಲಾಗಿದೆ. ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಪೂರ್ಣಗೊಳಿಸದೆ, ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರ ಮಾಡದೆ ಉದ್ಘಾಟನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಕಾಮಗಾರಿಯ ಗುಣಮಟ್ಟದ ಬಗ್ಗೆಯೂ ಆರೋಪಗಳಿದ್ದು, ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಮತ್ತು ನ್ಯಾ. ಎಚ್.ಎನ್. ನಾಗಮೋಹನ್ ದಾಸ್ ವಿಚಾರಣಾ ಆಯೋಗ ತನಿಖೆ ನಡೆಸುತ್ತಿದೆ.