ಸಮಾಜದಲ್ಲಿ ಮೀನುಗಾರಿಕೆ ಕೃಷಿ ಉದ್ಯಮಕ್ಕೆ ಹೆಚ್ಚಿನ ಬೇಡಿಕೆಯಿದೆ – ಸರೀಕ್ ರೇವನ್

0
4

ಬ್ರಹ್ಮಾವರ : ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ, ಬ್ರಹ್ಮಾವರ ಹಾಗೂ ಮರವಂತೆ ಮೀನುಗಾರರ ಸಹಕಾರ ಸಂಘ ನಿಯಮಿತ, ಮರವಂತೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಮೀನು ಸಾಕಾಣಿಕೆ ತರಬೇತಿಯ ಉದ್ಘಾಟನಾ ಸಮಾರಂಭವು ಮರವಂತೆ ಮೀನುಗಾರರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕೆನರಾ ಬ್ಯಾಂಕ್, ಮರವಂತೆ ಶಾಖೆಯ ವ್ಯವಸ್ಥಾಪಕರಾದ ಸರೀಕ್ ರೇವನ್ ಅವರು ಮಾತನಾಡಿ, ಸಮಾಜದಲ್ಲಿ ಮೀನುಗಾರಿಕೆ ಹಾಗೂ ಮೀನು ಸಾಕಾಣಿಕೆ ಕೃಷಿ ಉದ್ಯಮಕ್ಕೆ ಹೆಚ್ಚಿನ ಬೇಡಿಕೆಯಿದೆ. ಕಡಿಮೆ ಬಂಡವಾಳ ಹೂಡಿಕೆಯೊಂದಿಗೆ ಉತ್ತಮ ಆದಾಯ ಗಳಿಸಲು ಈ ಉದ್ಯಮದಲ್ಲಿ ವಿಫುಲ ಅವಕಾಶಗಳಿವೆ. ಆದ್ದರಿಂದ ಶಿಬಿರಾರ್ಥಿಗಳು ತರಬೇತಿಯಲ್ಲಿ ಪಡೆದ ಜ್ಞಾನ ಮತ್ತು ಕೌಶಲ್ಯಗಳನ್ನು ಉದ್ಯಮವಾಗಿ ರೂಪಿಸಿಕೊಂಡು ಸ್ವ ಉದ್ಯೋಗದತ್ತ ಹೆಜ್ಜೆ ಇಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮರವಂತೆ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷರಾದ ಪ್ರವೀಣ್ ಅವರು ಮಾತನಾಡಿ, ತರಬೇತಿಯಲ್ಲಿ ದೊರೆಯುವ ಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡು ಮುಂದಿನ ದಿನಗಳಲ್ಲಿ ಯಶಸ್ವಿ ಉದ್ಯಮಿಗಳಾಗಿ ಬೆಳೆಯುವಂತೆ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಅವರು ಮಾತನಾಡಿ, ಸಮಾಜದ ಮಹಿಳೆಯರು ಸ್ವ ಉದ್ಯೋಗವನ್ನು ಕೈಗೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಯಶಸ್ವಿ ಉದ್ಯಮಿಗಳಾಗಬೇಕು ಎಂದು ಹಾರೈಸಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ ಅವರು ಮಾತನಾಡಿ, ಶಿಬಿರಾರ್ಥಿಗಳು ತರಬೇತಿಯ ನಂತರ ಸ್ವ ಉದ್ಯೋಗ ಪ್ರಾರಂಭಿಸಲು ಅಗತ್ಯವಿರುವ ಬ್ಯಾಂಕ್ ಸಾಲ ಸೌಲಭ್ಯಗಳ ಕುರಿತು ಮಾರ್ಗದರ್ಶನ ಹಾಗೂ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ವೇದಿಕೆಯಲ್ಲಿ ಮರವಂತೆ ಮೀನುಗಾರರ ಸಹಕಾರ ಸಂಘದ ಉಪಾಧ್ಯಕ್ಷರಾದ ರತ್ನಾಕರ್ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ಗಂಗಾಧರ್ ಉಪಸ್ಥಿತರಿದ್ದು, ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮವನ್ನು ಹಿರಿಯ ಉಪನ್ಯಾಸಕರಾದ ಸಂತೋಷ್ ಶೆಟ್ಟಿ ನಿರೂಪಿಸಿದರು. ಕಚೇರಿ ಸಹಾಯಕರಾದ ಶಾಂತಪ್ಪ ಸ್ವಾಗತಿಸಿದರು. ಮರವಂತೆ ಮೀನುಗಾರರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ಗಂಗಾಧರ್ ವಂದಿಸಿದರು.