
ಬೆಳ್ತಂಗಡಿ : ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಗ್ರಾಮದ ಉದ್ದದ ಗುಡ್ಡೆಯಲ್ಲಿ ನಡೆದಿದೆ.
ಆ.14ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರ ನಡುವಿನ ಅವಧಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಉದ್ದದ ಗುಡ್ಡ ನಿವಾಸಿ ಅನ್ನಮ್ಮ (82) ಅವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ಪ್ರವೇಶಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮನೆಯೊಳಗೆ ಪ್ರವೇಶಿಸಿದ ಆರೋಪಿ, ಅನ್ನಮ್ಮ ಅವರ ಎರಡೂ ಕೈಗಳಲ್ಲಿದ್ದ ಸುಮಾರು 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಳೆಗಳನ್ನು ಎಳೆಯುವ ಸಂದರ್ಭದಲ್ಲಿ ಅನ್ನಮ್ಮ ಅವರ ಎಡಕೈಗೆ ರಕ್ತಗಾಯವಾಗಿದ್ದು, ಘಟನೆಯಿಂದ ವೃದ್ಧೆ ಆಘಾತಕ್ಕೊಳಗಾಗಿದ್ದಾರೆ.
ಘಟನೆಯ ಬಳಿಕ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅನ್ನಮ್ಮ ಅವರ ಪುತ್ರ ಸಾದಿಕ್ (45) ನೀಡಿದ ದೂರಿನ ಆಧಾರದ ಮೇಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಿಚಿತ ವ್ಯಕ್ತಿಯ ವಿರುದ್ಧ BNS-2023ರ ಕಲಂ 309(6) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ. ಘಟನೆಯ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಮಾಹಿತಿ, ಸಿಸಿಟಿವಿ ದೃಶ್ಯಗಳು ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
