ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ದಿಡುಪೆ ಫಾಲ್ಸ್ ಪ್ರದೇಶದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದಡಿ ಕಾಸರಗೋಡು ಮೂಲದ ಮೂವರು ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಪ್ರವಾಸದ ನೆಪದಲ್ಲಿ ಯುವತಿಯರನ್ನು ದಿಡುಪೆ ಫಾಲ್ಸ್‌ಗೆ ಕರೆದೊಯ್ದು ಕಿರುಕುಳ ನೀಡಲು ಯತ್ನಿಸಿದ ವೇಳೆ ಯುವತಿಯರು ಜೋರಾಗಿ ಚೀರಾಡಿದ್ದು, ಅವರ ಕೂಗಾಟ ಕೇಳಿ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಆರೋಪಿಗಳನ್ನು ಹಿಡಿದು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸುವ ಮೂಲಕ ಸ್ಥಳೀಯರು ಮಾನವೀಯತೆ ಮೆರೆದಿದ್ದಾರೆ.
ಬಂಧಿತರನ್ನು ಕಾಸರಗೋಡು ಮೂಲದ ಅಬ್ದುಲ್ ಖಾದರ್, ಫೈಜಲ್ ಹಾಗೂ ಉಸ್ಮಾನ್ ಸಲೀಂ ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ, ಆರೋಪಿಗಳು ಅನ್ಯಕೋಮಿನ ಯುವತಿಯರನ್ನು ದಿಡುಪೆ ಫಾಲ್ಸ್ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸಂತ್ರಸ್ತೆಯೊಬ್ಬರು ಜೋರಾಗಿ ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ.
ಯುವತಿಯರ ಚೀರಾಟ ಕೇಳಿದ ಸ್ಥಳೀಯರು ತಕ್ಷಣ ಮಧ್ಯಪ್ರವೇಶಿಸಿ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಸಂತ್ರಸ್ತೆಯ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಈ ಘಟನೆ ಬಳಿಕ ಪ್ರವಾಸಿ ತಾಣಗಳಲ್ಲಿ ಮಹಿಳೆಯರ ಸುರಕ್ಷತೆ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿದ್ದು, ಪೊಲೀಸ್ ಪೆಟ್ರೋಲಿಂಗ್ ಹೆಚ್ಚಿಸಬೇಕೆಂಬ ಆಗ್ರಹವೂ ಕೇಳಿಬರುತ್ತಿದೆ.

