ಮೂವರು ರೌಡಿಶೀಟರ್‌ಗಳಿಗೆ ಗಡೀಪಾರು ಶಿಕ್ಷೆ – ಎಸ್‌ಪಿ ಕಠಿಣ ಕ್ರಮ..!

0
33

ಉಡುಪಿ : ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ ಮೂವರು ಆರೋಪಿಗಳ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಡೀಪಾರು ಆದೇಶ ಹೊರಡಿಸಿದ್ದಾರೆ.

ಗಡೀಪಾರು ಆದೇಶಕ್ಕೆ ಒಳಗಾದವರು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೊಹಮ್ಮದ್ ದಾನೀಶ್ ಮದನಿ (23), ಕರಾಣಿ ಮುಸೀನ್ (44) ಹಾಗೂ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಇಲಿಯಾಸ್ (36) ಆಗಿದ್ದಾರೆ.

ಪೊಲೀಸರ ಮಾಹಿತಿಯಂತೆ, ಮೊಹಮ್ಮದ್ ದಾನೀಶ್ ಮದನಿ ವಿರುದ್ಧ 8 ಪ್ರಕರಣಗಳು ದಾಖಲಾಗಿದ್ದು, ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ರೌಡಿಶೀಟರ್ ಆಗಿ ದಾಖಲಿಸಲಾಗಿದೆ. ಕರಾಣಿ ಮುಸೀನ್ ವಿರುದ್ಧ 7 ಪ್ರಕರಣಗಳು ದಾಖಲಾಗಿದ್ದು, ಅವರ ಮೇಲೂ ರೌಡಿ ಶೀಟ್ ತೆರೆಯಲಾಗಿದೆ. ಇಲಿಯಾಸ್ ವಿರುದ್ಧ 15 ಪ್ರಕರಣಗಳು ದಾಖಲಾಗಿದ್ದು, ಶಿರ್ವ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿ ಗುರುತಿಸಲಾಗಿದೆ.

ಗಡೀಪಾರು ಆದೇಶದಂತೆ, ಮೊಹಮ್ಮದ್ ದಾನೀಶ್ ಮದನಿಯನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ, ಕರಾಣಿ ಮುಸೀನ್‌ನನ್ನು ಬೀದರ್ ಜಿಲ್ಲೆಯ ಗಾಂಧಿಗಂಜ ಪೊಲೀಸ್ ಠಾಣೆ ವ್ಯಾಪ್ತಿಗೆ ಹಾಗೂ ಇಲಿಯಾಸ್‌ನನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಸ್ಥಳಾಂತರಿಸಲಾಗಿದೆ.

ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಪೊಲೀಸರು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. ಈ ಅವಧಿಯಲ್ಲಿ ಮೂವರ ವಿರುದ್ಧ ಪಿಐಟಿ-ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ನಾಲ್ವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಜೊತೆಗೆ 14 ಮಂದಿಯ ವಿರುದ್ಧ ಗಡೀಪಾರು ಕ್ರಮ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here