ಮೂರು ದಿನ ರಾಜ್ಯಾದ್ಯಂತ ಗುಡುಗು-ಮಿಂಚಿನ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ಮಳೆ ಅಲರ್ಟ್

0
72

ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯೊಂದಿಗೆ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಮೈಸೂರು, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮೇ 8 ಮತ್ತು 9ರಂದು ಗುಡುಗು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಯ ಕೆಲವೆಡೆ ಮೇ 8ರಂದು ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಮಳೆಯ ವಾತಾವರಣ ಇದ್ದರೂ ರಾಜ್ಯದ ಗರಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ. ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್ ವರೆಗೆ ಮುಂದುವರಿಯಲಿದೆ.

ಇನ್ನೊಂದೆಡೆ, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here