ತಿರುಪತಿ: ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಸಿಎಂ ಎನ್.ಚಂದ್ರಬಾಬು ನಾಯ್ಡು ಅವರು ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಪ್ರಮುಖ ಅಧಿಕಾರಿಗಳನ್ನು ಅಮಾನತುಗೊಳಿಸಿ, ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.
ಸಿಎಂ ಚಂದ್ರಬಾಬು ನಾಯ್ಡು ಅವರು, ಕಾಲ್ತುಳಿತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರ ಆರೋಗ್ಯವನ್ನು ವಿಚಾರಿಸಿದರು.
ಬಳಿಕ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಚಂದ್ರಬಾಬು ನಾಯ್ಡು, ತಿರುಪತಿಯಲ್ಲಿ ಮೇಲ್ವಿಚಾರಣೆ ವ್ಯವಸ್ಥೆಯಲ್ಲಿ ಕೆಲವು ಲೋಪದೋಷಗಳನ್ನು ನಾನು ನೋಡಿದ್ದೇನೆ. ಬೇಜವಾಬ್ದಾರಿಯಿಂದ ವರ್ತಿಸಿದ ಡಿಎಸ್ಪಿ ರಮಣ ಕುಮಾರ್ ಅವರನ್ನು ಮತ್ತು ಟಿಟಿಡಿ ಗೋಶಾಲಾ ನಿರ್ದೇಶಕ ಹರಿನಾಥ್ ರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು.
ಅಲ್ಲದೆ, ಎಸ್ಪಿ ಸುಬ್ಬಾ ರಾಯುಡು, ಟಿಟಿಡಿ ಜೆಇಒ ಗೌತಮಿ ಮತ್ತು ಟಿಟಿಡಿ ಸಿವಿಎಸ್ಒ ಶ್ರೀಧರ್ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳನ್ನು ಸಹ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಕಾಲ್ತುಳಿತ ದುರಾದೃಷ್ಟಕರ ಘಟನೆ. ಇಂತಹ ದುರಂತಗಳನ್ನು ತಪ್ಪಿಸಲು ಕ್ರಮಗಳನ್ನು ಜಾರಿಗೆ ತರಲಾಗುವುದು. ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದ್ದು, ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.