ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ಅಗತ್ಯ

0
49

ಉಡುಪಿ : ಜಿಲ್ಲೆಯ ಕಡಲ ತೀರಗಳು ಸೇರಿದಂತೆ ಪ್ರವಾಸಿ ತಾಣಗಳ ಸೌಂದರ್ಯ ಸವಿಯಲು ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಯಾವುದೇ ಪ್ರಾಣಾಪಾಯಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೀಚ್​ ಸುರಕ್ಷತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಕಡಲಲ್ಲಿ ವಿಹರಿಸಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿ ಬೋಟ್​ಗಳ ಮೊರೆ ಹೋಗುತ್ತಾರೆ. ಆದ್ದರಿಂದ ಜಿಲ್ಲೆಯ ಎಲ್ಲಾ ಪ್ರವಾಸಿ ಬೋಟ್​ಗಳು ಬಂದರು, ಪೊಲೀಸ್​, ಕರಾವಳಿ ಕಾವಲು ಪಡೆ, ಸ್ಥಳಿಯ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಪಡೆದು ಕಡಲಿಗೆ ಇಳಿಯಬೇಕು ಎಂದರು.

ಜಿಲ್ಲೆಯಲ್ಲಿರುವ ಎಲ್ಲಾ ಪ್ರವಾಸಿ ಬೋಟುಗಳು ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ 45 ದಿನಗಳ ಒಳಗಾಗಿ ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಿಂದ ನೋಂದಣಿ ಮಾಡಿಕೊಂಡು ಅನುಮತಿ ಪಡೆದುಕೊಳ್ಳಬೇಕು. ಅನುಮತಿ ಪಡೆಯದೇ ಇರುವ ಪ್ರವಾಸೀ ಬೋಟ್​ಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಅನುಮತಿ ಪಡೆದ ಪ್ರವಾಸಿ ಬೋಟ್​ಗಳು ಪ್ರತಿ ವರ್ಷ ತಮ್ಮ ಪರವಾನಿಗೆಯನ್ನು ನವೀಕರಿಸಿಕೊಳ್ಳಬೇಕು ಎಂದರು.

ಪ್ರವಾಸಿ ಬೋಟ್​ಗಳಲ್ಲಿ ಪ್ರವಾಸಿಗರ ಹಿತದೃಷ್ಟಿಯಿಂದ ಲೈಫ್​ ಜಾಕೆಟ್​ ಧರಿಸುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರತಿಯೊಬ್ಬ ಪ್ರವಾಸಿಗರು ಕಡಲಿಗೆ ಇಳಿಯುವ ಮುನ್ನ ಲೈಫ್​ ಜಾಕೆಟ್​ ಧರಿಸುವಂತೆ ನೋಡಿಕೊಳ್ಳಬೇಕು. ಪ್ರವಾಸಿ ಬೋಟ್​ಗಳಲ್ಲಿ ಎಲ್ಲರೂ ಲೈಫ್​ ಜಾಕೆಟ್​ ಧರಿಸಿದ್ದಲ್ಲಿ ಮಾತ್ರ ಬೋಟ್​ ಮುಂದೆ ಸಾಗಲಿದೆ ಎಂಬ ಪ್ರೀ-ರೆಕಾರ್ಡೆಡ್​ ಆಡಿಯೋವನ್ನು ಬೋಟ್​ಗಳಲ್ಲಿ ಹೊರಡಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲಿಸ್​ ವರಿಷ್ಠಾಧಿಕಾರಿ ಹರಿರಾಮ್​ ಶಂಕರ್​, ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್​.ಎಂ. ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here