
ಉಡುಪಿ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಹಿರ್ಗಾನ ಗ್ರಾಮದ ಹೆರ್ಮುಂಡೆ ಸಮೀಪ ಸಂಭವಿಸಿದೆ.
ಮೃತರನ್ನು ಹಿರ್ಗಾನದ ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (23) ಎಂದು ಗುರುತಿಸಲಾಗಿದೆ.
ಕೆಲಸಕ್ಕೆ ರಜೆ ಇದ್ದ ಹಿನ್ನೆಲೆಯಲ್ಲಿ ಐವರು ಸ್ನೇಹಿತರು ಮಂಗಿಲಾರು ಮೂಲಕ ಸುಮಾರು ಎರಡು ಕಿ.ಮೀ. ದುರ್ಗಮ ದಾರಿಯಲ್ಲಿ ನಡೆದು ಸುವರ್ಣ ನದಿಗೆ ತೆರಳಿದ್ದರು. ಈ ವೇಳೆ ಭರತ್ ಹಾಗೂ ಹರ್ಷನ್ ಆಳವಾದ ನೀರಿನ ಭಾಗಕ್ಕೆ ತೆರಳಿದಾಗ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.
ಘಟನೆ ಬಗ್ಗೆ ಸ್ನೇಹಿತರು ತಕ್ಷಣ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದರು. ವಾಹನ ಸಂಚಾರಕ್ಕೆ ಸೂಕ್ತ ದಾರಿ ಇಲ್ಲದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಮೂರು ಕಿ.ಮೀ. ಕಾಲ್ನಡಿಗೆಯಲ್ಲಿ ಘಟನಾ ಸ್ಥಳಕ್ಕೆ ತಲುಪಿದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಮೂರು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹಗಳನ್ನು ಮೇಲಕ್ಕೆತ್ತಲಾಯಿತು. ಠಾಣಾಧಿಕಾರಿ ಸಂಜೀವ ದೇವಾಡಿಗ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಭರತ್ ಪೇಂಟಿಂಗ್ ಕೆಲಸ ಮಾಡಿಕೊಂಡು ಕುಟುಂಬವನ್ನು ನಿರ್ವಹಿಸುತ್ತಿದ್ದರು. ಸ್ವಂತ ಮನೆ ನಿರ್ಮಿಸಬೇಕೆಂಬ ಕನಸಿನೊಂದಿಗೆ ಕೈಗೊಂಡಿದ್ದ ಮನೆಯ ಕಾಮಗಾರಿ ಸ್ಲಾಬ್ ಹಂತ ತಲುಪಿತ್ತು. ಶೀಘ್ರದಲ್ಲೇ ಗೃಹ ಪ್ರವೇಶ ನಡೆಸುವ ನಿರೀಕ್ಷೆಯಲ್ಲಿದ್ದ ಅವರು ದುರಂತದಲ್ಲಿ ಮೃತಪಟ್ಟಿರುವುದು ಕುಟುಂಬಸ್ಥರು ಹಾಗೂ ಬಂಧುಗಳಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
