ರೈಲ್ವೆ ಸಿಬ್ಬಂದಿಯ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ?

0
19

ಶಾಲಾ ಮಕ್ಕಳಿದ್ದ ವ್ಯಾನ್‌ಗೆ ರೈಲು ಡಿಕ್ಕಿ

ಮುರ್ಷಿದಾಬಾದ್ : ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಸೈಕಲ್ ಸವಾರನೂ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬರ್ಹಾಂಪೋರ್ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಣಸುಬರ್ಣ ಮತ್ತು ಗೋಬಿಂದಾಪುರ ರೈಲು ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್‌ನಲ್ಲಿ ಈ ಅಪಘಾತ ನಡೆದಿದೆ. ನಿಮ್ಟಿತಾ–ಕಟ್ವಾ ಮಾರ್ಗದಲ್ಲಿ ಸಂಚರಿಸುತ್ತಿದ್ದ ಪ್ಯಾಸೆಂಜರ್ ರೈಲು ಬರುತ್ತಿದ್ದ ವೇಳೆ ಶಾಲಾ ವ್ಯಾನ್ ಹಾಗೂ ಸೈಕಲ್ ಸವಾರ ಹಳಿ ದಾಟಲು ಮುಂದಾಗಿದ್ದರು. ಇದೇ ವೇಳೆ ವೇಗವಾಗಿ ಬಂದ ರೈಲು ಭೀಕರವಾಗಿ ಡಿಕ್ಕಿ ಹೊಡೆದಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಅಪಘಾತ ಸಂಭವಿಸಿದ ಸಮಯದಲ್ಲಿ ಲೆವೆಲ್ ಕ್ರಾಸಿಂಗ್ ಗೇಟ್ ತೆರೆದಿತ್ತು ಅಥವಾ ಸಮರ್ಪಕವಾಗಿ ಮುಚ್ಚಲಾಗಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಆದರೆ ಈ ಕುರಿತು ಅಧಿಕೃತ ತನಿಖೆ ನಡೆಯುತ್ತಿದೆ.

ಅಪಘಾತದ ರಭಸಕ್ಕೆ ಶಾಲಾ ವ್ಯಾನ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಹಾಗೂ ಮತ್ತೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕನಿಷ್ಠ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ಬಳಿಕ ಸ್ಥಳೀಯರು ಮತ್ತು ಪೊಲೀಸರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಕರ್ಣಸುಬರ್ಣ ಬ್ಲಾಕ್ ಆಸ್ಪತ್ರೆಗೆ ದಾಖಲಿಸಿದರು. ಗಂಭೀರವಾಗಿ ಗಾಯಗೊಂಡ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ರೈಲ್ವೆ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲೆವೆಲ್ ಕ್ರಾಸಿಂಗ್ ನಿರ್ವಹಣೆಯಲ್ಲಿ ನಿರ್ಲಕ್ಷ್ಯವಿತ್ತೇ ಅಥವಾ ಬೇರೆ ಕಾರಣದಿಂದ ಅಪಘಾತ ಸಂಭವಿಸಿತೇ ಎಂಬ ಕುರಿತು ತನಿಖೆ ಆರಂಭಿಸಿದ್ದಾರೆ.

ಘಟನೆಯಲ್ಲಿ ಮಕ್ಕಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.