ಕಾಪು : ಉಡುಪಿ ಜಿಲ್ಲೆಯ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೋಟಾರ್ ಸೈಕಲ್‌ನಲ್ಲಿ ಬಂದಿದ್ದ ಆರೋಪಿಗಳ ಪೈಕಿ ಸಹಸವಾರ ಪಿಸ್ತೂಲ್‌ನಿಂದ ಡೇವಿಡ್ ಅವರ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಈಗಾಗಲೇ ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ತನಿಖೆ ವೇಳೆ ಆರೋಪಿಗಳಿಗೆ ಕೃತ್ಯಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ಮಾಡಲು ಸಹಾಯ ಮಾಡಿದ್ದವರ ಪಾತ್ರವೂ ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ಚಿರಾಗ್ ಪೂಜಾರಿ (26), ಕಿಶೋರ್ ಪೂಜಾರಿ ಅವರ ಪುತ್ರ, ಎರ್ಮಾಳ್ ತೆಂಕ, ಕಾಪು ತಾಲೂಕು ಹಾಗೂ ಮೊಹಮ್ಮದ್ ಇರ್ಷಾದ್ (43), ದಿವಂಗತ ಹುಸೇನ್ ಅವರ ಪುತ್ರ, ಎರ್ಮಾಳ್ ತೆಂಕ, ಕಾಪು ತಾಲೂಕು ಎಂಬವರನ್ನು ಆಗಸ್ಟ್ 12ರಂದು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಇಬ್ಬರು ಆರೋಪಿಗಳನ್ನು ವಿಚಾರಣೆಗೊಳಪಡಿಸಲಾಗಿದ್ದು, ಕೊಲೆಯ ಹಿಂದಿನ ಉದ್ದೇಶ, ಹಣಕಾಸಿನ ವ್ಯವಹಾರ ಹಾಗೂ ಇತರ ಆರೋಪಿಗಳೊಂದಿಗೆ ಅವರಿಗಿದ್ದ ಸಂಪರ್ಕ ಸೇರಿದಂತೆ ಪ್ರಕರಣದ ವಿವಿಧ ಆಯಾಮಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದಲ್ಲಿ ಇದುವರೆಗೆ ಬಂಧಿತರಾಗಿರುವ ಆರೋಪಿಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ತನಿಖೆ ಮುಂದುವರಿದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಪೊಲೀಸರ ತನಿಖೆಯ ಬಳಿಕ ಬಹಿರಂಗವಾಗುವ ಸಾಧ್ಯತೆಯಿದೆ.

