ಉಡುಪಿ ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ : 8,746 ವಿದ್ಯಾರ್ಥಿಗಳು ಪರೀಕ್ಷೆಗೆ ಸಜ್ಜು

0
87

ಉಡುಪಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್ 23 ಮತ್ತು 24ರಂದು ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ವಿದ್ಯಾರ್ಥಿ ಸ್ನೇಹಿಯಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿಇಟಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳಲ್ಲಿ ಒಟ್ಟು 23 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದರು. ಉಡುಪಿಯಲ್ಲಿ 11, ಕಾರ್ಕಳದಲ್ಲಿ 5 ಮತ್ತು ಕುಂದಾಪುರದಲ್ಲಿ 7 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 8,746 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆ ಪ್ರಾರಂಭಕ್ಕೂ ಎರಡು ಗಂಟೆ ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರಗಳಿಗೆ ಹಾಜರಾಗಬೇಕು ಎಂದು ಸೂಚಿಸಿದ ಅವರು, ಪರಿಶೀಲನಾ ಪ್ರಕ್ರಿಯೆಯನ್ನು ಯಾವುದೇ ಗೊಂದಲವಿಲ್ಲದೆ ಸುಗಮವಾಗಿ ನಡೆಸಿ, ವಿದ್ಯಾರ್ಥಿಗಳು ತಕ್ಷಣ ಪರೀಕ್ಷಾ ಕೊಠಡಿಗಳಿಗೆ ಪ್ರವೇಶಿಸಲು ವ್ಯವಸ್ಥೆ ಮಾಡಬೇಕು ಎಂದರು.

ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಗಡಿಯಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಪರೀಕ್ಷಾ ದಿನಗಳಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ಅಧಿಕಾರಿಗಳಿಗೆ ವಿಶೇಷ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಈಗಾಗಲೇ ನೀಡಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್‌, ಎ.ಎಸ್.ಪಿ. ಸುಧಾಕರ್ ನಾಯಕ್‌, ಜಿ.ಪಂ. ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಡಿಡಿಪಿಯು ಮಾರುತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಮತ್ತು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾದ ಸಿಬ್ಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here