ಉಡುಪಿ : ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಉಡುಪಿಯ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಶೆಟ್ಟಿ (44) ಎಂದು ಗುರುತಿಸಲಾಗಿದೆ.
ಸಚಿನ್ ಶೆಟ್ಟಿ ಅವರು ಕಳೆದ ನಾಲ್ಕು ವರ್ಷಗಳಿಂದ ಸಾಯಿರಾಜ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಂಬಲಪಾಡಿಯ ಬಿಆರ್ ಮೆಡೋಸ್ ಅಪಾರ್ಟ್‌ಮೆಂಟ್‌ನಲ್ಲಿ ಅವರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಯಾವುದೇ ಕಾರಣ ಅಥವಾ ಆತ್ಮಹತ್ಯೆ ಪತ್ರ ಪತ್ತೆಯಾಗಿದೆಯೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆಯ ಮಾಹಿತಿ ಲಭಿಸಿದ ತಕ್ಷಣ ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಕ್ರಮ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

