ಯುವ ಮಾಡೆಲ್ ಕೃತಿ ಬಂಗೇರಾ ಅಸಹಜ ಸಾವು ; ಏನಾಯಿತು ಆ ದಿನ?

0
20

ಉಡುಪಿ : ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿಯಲ್ಲಿ ನಡೆದಿದೆ. ಆಗಸ್ಟ್ 6ರಂದು ಮಧ್ಯಾಹ್ನ ಈ ಘಟನೆ ಬೆಳಕಿಗೆ ಬಂದಿದೆ.

ಕಲ್ಮಾಡಿ ನಿವಾಸಿ ರತ್ನಾ ಅವರ ಪುತ್ರಿಯಾಗಿದ್ದ ಕೃತಿ, ಉಡುಪಿಯ ಕಡಿಯಾಳಿ ಸಮೀಪದ ಖಾಸಗಿ ಹೋಟೆಲ್‌ನಲ್ಲಿ ಉದ್ಯೋಗದಲ್ಲಿದ್ದರು. ಕಳೆದ ಸುಮಾರು ಐದು ತಿಂಗಳಿನಿಂದ ಅವರು ಕೆಲಸಕ್ಕೆ ತೆರಳದೆ ಮನೆಯಲ್ಲೇ ಇದ್ದರು ಎಂದು ತಿಳಿದುಬಂದಿದೆ. ವೈಯಕ್ತಿಕ ಕಾರಣಗಳಿಂದಾಗಿ ಅವರು ಮಾನಸಿಕ ಒತ್ತಡದಲ್ಲಿದ್ದರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಆಗಸ್ಟ್ 6ರಂದು ಕೃತಿಯ ತಾಯಿ ಕೆಲಸದ ನಿಮಿತ್ತ ಮಲ್ಪೆಗೆ ತೆರಳಿದ್ದು, ಸಹೋದರಿಯೂ ಉಡುಪಿಗೆ ಹೋಗಿದ್ದರು. ಮನೆಯಲ್ಲಿದ್ದ ಕೃತಿ ತಮ್ಮ ಕೋಣೆಯೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ಕುಟುಂಬಸ್ಥರು ಮನೆಗೆ ಮರಳಿದಾಗ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ದೊರೆಯಲಿಲ್ಲ. ಇದರಿಂದ ಆತಂಕಗೊಂಡ ಅವರು ಕೃತಿಯ ಸಹೋದರ ಚಂದ್ರ ಅವರಿಗೆ ಮಾಹಿತಿ ನೀಡಿದರು. ಬಳಿಕ ಬಾಗಿಲು ತೆರೆದು ಒಳಗೆ ಪ್ರವೇಶಿಸಿದಾಗ ಕೃತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಕ್ಷಣವೇ ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಡುಪಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ವೈಯಕ್ತಿಕ ಕಾರಣಗಳಿಂದ ಮಾನಸಿಕ ಒತ್ತಡದಲ್ಲಿದ್ದಿರಬಹುದು ಎಂಬ ಮಾಹಿತಿ ಲಭ್ಯವಾಗಿದ್ದರೂ, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಪೊಲೀಸರು ಮೃತೆಯ ಕುಟುಂಬಸ್ಥರು, ಸ್ನೇಹಿತರು ಹಾಗೂ ಪರಿಚಯಸ್ಥರಿಂದ ಮಾಹಿತಿ ಸಂಗ್ರಹಿಸುತ್ತಿದ್ದು, ಮೊಬೈಲ್ ಸೇರಿದಂತೆ ಇತರೆ ಸಾಕ್ಷ್ಯಾಧಾರಗಳನ್ನೂ ಪರಿಶೀಲಿಸುತ್ತಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕವೇ ಘಟನೆಯ ಹಿಂದಿನ ನಿಖರ ಕಾರಣ ಬಹಿರಂಗವಾಗುವ ಸಾಧ್ಯತೆಯಿದೆ.