ಉಳ್ಳಾಲ : ಉಳ್ಳಾಲದ ಐತಿಹಾಸಿಕ ಸೋಮೇಶ್ವರ ದೇವಸ್ಥಾನದಲ್ಲಿ ಆಗಸ್ಟ್ 28, 2026ರ ಶುಕ್ರವಾರದಂದು ಬೆಳಿಗ್ಗೆ 10 ಗಂಟೆಗೆ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಗಿದೆ.
ಸೋಮೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸೂರ್ಯನಾರಾಯಣ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಪೂಜಾ ಕಾರ್ಯಕ್ರಮ ನಡೆಯಲಿದೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಆಡಳಿತ ಮಂಡಳಿಯ ನೇತೃತ್ವದಲ್ಲಿ ಧಾರ್ಮಿಕ ವಿಧಿ-ವಿಧಾನಗಳು ನೆರವೇರಲಿವೆ.
ವರಮಹಾಲಕ್ಷ್ಮೀ ಪೂಜೆಯ ಅಂಗವಾಗಿ ವಿಶೇಷ ಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪೂಜೆಯಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಪ್ರಸಾದ ವಿತರಣೆಯ ವ್ಯವಸ್ಥೆಯನ್ನೂ ದೇವಸ್ಥಾನದ ಆಡಳಿತ ಮಂಡಳಿ ಮಾಡಿದೆ.
ವರಮಹಾಲಕ್ಷ್ಮೀ ವ್ರತದ ಪುಣ್ಯಸಂದರ್ಭದಲ್ಲಿ ಮಹಿಳೆಯರು ಸೇರಿದಂತೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ವರಮಹಾಲಕ್ಷ್ಮೀ ದೇವಿಯ ಅನುಗ್ರಹಕ್ಕೆ ಪಾತ್ರರಾಗುವಂತೆ ದೇವಸ್ಥಾನದ ಭಕ್ತವೃಂದ ಮನವಿ ಮಾಡಿದೆ.
ಉಳ್ಳಾಲ ತಾಲೂಕಿನ 27 ಗ್ರಾಮಗಳ ಸಮಸ್ತ ಹಿಂದೂ ಬಂಧುಗಳು, ಮಹಿಳೆಯರು ಹಾಗೂ ಭಕ್ತರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಆಡಳಿತ ಮಂಡಳಿ ಕೋರಿದೆ.

