ಹಿರಿಯ ಶಿಕ್ಷಣ ತಜ್ಞ, ನಿಟ್ಟೆ ಶಿಕ್ಷಣ ಟ್ರಸ್ಟ್‌ನ ಸ್ಥಾಪಕ ಡಾ. ಎನ್.ಆರ್. ಶೆಟ್ಟಿ ನಿಧನ

0
20

ಮಂಗಳೂರು : ಹಿರಿಯ ಶಿಕ್ಷಣ ತಜ್ಞ, ಖ್ಯಾತ ಸಂಶೋಧಕ ಹಾಗೂ ನಿಟ್ಟೆ ಶಿಕ್ಷಣ ಟ್ರಸ್ಟ್‌ನ ಸ್ಥಾಪಕರಲ್ಲಿ ಒಬ್ಬರಾದ ಡಾ. ಪ್ರೊ. ಎನ್.ಆರ್. ಶೆಟ್ಟಿ (ನಿಟ್ಟೆ ರಾಮಾನಂದ ಶೆಟ್ಟಿ) ಅವರು ಇಂದು (ನ.12) ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕದ್ರಿಯಲ್ಲಿರುವ ಪುತ್ರಿ ಡಾ. ಸುಪ್ರಿಯಾ ರೈ ಮತ್ತು ಅಳಿಯ ಡಾ. ದೇವದಾಸ್ ರೈ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

1960ರಲ್ಲಿ ಸುರತ್ಕಲ್‌ನ ಕರ್ನಾಟಕ ರೀಜನಲ್ ಎಂಜಿನಿಯರಿಂಗ್ ಕಾಲೇಜು (ಕೆಆರ್‌ಇಸಿ)ಗೆ ಸೇವೆಗೆ ಸೇರಿದ ಅವರು 1993ರವರೆಗೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. 1988ರಿಂದ 1993ರವರೆಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಡೀನ್ ಆಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

ತಾಂತ್ರಿಕ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದ ಅವರು, ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಹಾಗೂ ನವದೆಹಲಿಯ ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ಆರ್ಟ್ಸ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಭಾರತೀಯ ತಾಂತ್ರಿಕ ಶಿಕ್ಷಣ ಸಂಘದ (ISTE) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಮೈಕ್ರೋವೇವ್ ಎಂಜಿನಿಯರಿಂಗ್ ಮತ್ತು ಆಪ್ಟೋ ಎಲೆಕ್ಟ್ರಾನಿಕ್ಸ್ ಕ್ಷೇತ್ರಗಳಲ್ಲಿ ವಿಶೇಷ ಪರಿಣತಿ ಹೊಂದಿದ್ದ ಅವರು, ಅಮೆರಿಕದ ಟೆಕ್ಸಾಸ್ ವಿಶ್ವವಿದ್ಯಾನಿಲಯದಲ್ಲಿ ಫುಲ್‌ಬ್ರೈಟ್ ಫೆಲೋ ಆಗಿ ಉನ್ನತ ಸಂಶೋಧನೆ ನಡೆಸಿದ್ದರು. ಬ್ರಿಟನ್‌ನ ಪ್ರಮುಖ ಸಂಶೋಧನಾ ಪ್ರಯೋಗಾಲಯಗಳಲ್ಲಿಯೂ ಸಂಶೋಧನಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.

ಶಿಕ್ಷಣ ಕ್ಷೇತ್ರದ ಜೊತೆಗೆ ಸಾಂಸ್ಕೃತಿಕ ಅಭಿವೃದ್ಧಿಯಲ್ಲಿಯೂ ಆಸಕ್ತಿ ಹೊಂದಿದ್ದ ಅವರು, ನಿಟ್ಟೆ ಶಿಕ್ಷಣ ಟ್ರಸ್ಟ್‌ನ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಶೈಕ್ಷಣಿಕ ಹಾಗೂ ಸಾಮಾಜಿಕ ಕೊಡುಗೆಗಳನ್ನು ಗುರುತಿಸಿ ಶಿರೋಮಣಿ ವಿಕಾಸ್ ಪ್ರಶಸ್ತಿ, ಭಾರತ್ ವಿಕಾಸ್ ಪ್ರಶಸ್ತಿ, ಭಾರ್ಗವ ಪ್ರಶಸ್ತಿ ಮತ್ತು ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ರಾಷ್ಟ್ರೀಯ ಪರಿಸರ ರತ್ನ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಲಭಿಸಿದ್ದವು.

ಅವರ ನಿಧನಕ್ಕೆ ಶಿಕ್ಷಣ, ಸಂಶೋಧನೆ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.