ಉಗ್ರ ವರ್ತನೆ: ನೇಪಾಳ ಮೂಲದ ಯುವಕ ಆಸ್ಪತ್ರೆಗೆ ದಾಖಲು

0
19

ಉಡುಪಿ : ಸಾರ್ವಜನಿಕ ಸ್ಥಳಗಳಲ್ಲಿ ಉಗ್ರವಾಗಿ ವರ್ತಿಸಿ ಭಯದ ವಾತಾವರಣ ಸೃಷ್ಟಿಸುತ್ತಿದ್ದ ನೇಪಾಳ ಮೂಲದ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗ ಆಸ್ಪತ್ರೆಗೆ ದಾಖಲಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಆಸ್ಪತ್ರೆಗೆ ದಾಖಲಾದ ಯುವಕ ಕೊಳಲಗಿರಿಯಲ್ಲಿ ದಾಂಧಲೆ ನಡೆಸುತ್ತಿದ್ದಾಗ ಆತನ ಮಿತ್ರರು ಆತನನ್ನು ನಿಯಂತ್ರಣಕ್ಕೆ ಪಡೆದು ಸಮಾಜಸೇವಕ ನಿತ್ಯಾನಂದ ಒಳಕಾಡುವರಿಗೆ ಒಪ್ಪಿಸಿದ್ದರು. ಬಳಿಕ ಒಳಕಾಡುವರು ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯುವಕ ಬಹಳ ಸಮಯದಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದನೆಂದು ತಿಳಿದುಬಂದಿದೆ. ಈ ಘಟನೆಯ ಕುರಿತು ನಿತ್ಯಾನಂದ ಒಳಕಾಡುವರು ಮಣಿಪಾಲ ಪೊಲೀಸ್ ಠಾಣೆಗೆ ಮೌಖಿಕವಾಗಿ ಮಾಹಿತಿ ನೀಡಿದ್ದಾರೆ.

ಯುವಕನ ಹೆಸರು ಮನೋಜ್ ಆಗಿದ್ದು, ಸಗ್ರಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಸೆಕ್ಯೂರಿಟಿ ಕೆಲಸ ನಿರ್ವಹಿಸುತ್ತಿದ್ದನೆಂದು ತಿಳಿದುಬಂದಿದೆ. ಉಡುಪಿ ಪರಿಸರದಲ್ಲಿ ಆತನ ಸಂಬಂಧಿಕರು ಇರುವ ಮಾಹಿತಿ ಲಭ್ಯವಾಗಿದ್ದು, ಯುವಕನ ವಾರಸುದಾರರು ತಕ್ಷಣ ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗ ಆಸ್ಪತ್ರೆಗೆ ಸಂಪರ್ಕಿಸುವಂತೆ ಸೂಚಿಸಲಾಗಿದೆ.