ವಿವೇಕಾನಂದ ಪದವಿಪೂರ್ವ ಕಾಲೇಜಿನ 60ನೇ ವರ್ಷಾಚರಣೆಯ ಪ್ರಯುಕ್ತ ಸಾರ್ವಜನಿಕರಿಗಾಗಿ ‘ವಿವೇಕ ಗಾನಾಮೃತ’ ಎಂಬ ವಿಶೇಷ ಸಂಗೀತ ಕಾರ್ಯಕ್ರಮವನ್ನು ಏಕತಾ ವೇದಿಕೆಯಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯಾತ ಸಂಕೀರ್ತನಕಾರ, ಸಂಗೀತ ವಿದ್ಯಾನಿಧಿ ಡಾ. ವಿದ್ಯಾಭೂಷಣ ಅವರು ಭಕ್ತಿ ರಸಮಂಜರಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅವರ ಭಕ್ತಿಗೀತೆಗಳು ಸಂಗೀತಾಸಕ್ತರಿಗೆ ಆಧ್ಯಾತ್ಮಿಕ ಅನುಭವವನ್ನು ನೀಡಿದವು. ಕಾರ್ಯಕ್ರಮದಲ್ಲಿ 700ಕ್ಕೂ ಅಧಿಕ ಸಾರ್ವಜನಿಕರು ಭಾಗವಹಿಸಿದ್ದರು.

ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿರುವ ಡಾ. ವಿದ್ಯಾಭೂಷಣ ಅವರನ್ನು ಈ ಸಂದರ್ಭದಲ್ಲಿ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಸಂಸ್ಥೆಯೊಂದಿಗೆ ಅವರಿಗಿರುವ ಒಡನಾಟ ಹಾಗೂ ಸಂಗೀತ ಕ್ಷೇತ್ರದಲ್ಲಿನ ಸಾಧನೆಯನ್ನು ಗೌರವಿಸುವ ನಿಟ್ಟಿನಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ನಿವೃತ್ತ ಯೋಧ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ., ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ವಿದ್ಯಾವರ್ಧಕ ಸಂಘದ ನಿರ್ದೇಶಕ ಶ್ರೀಪತಿ ಕಲ್ಲೂರಾಯ ಮತ್ತು ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಉಪನ್ಯಾಸಕಿ ಪುಷ್ಪಲತಾ ನಿರೂಪಿಸಿದರು. ಕಾಲೇಜಿನ 60ನೇ ವರ್ಷದ ಸಂಭ್ರಮಕ್ಕೆ ‘ವಿವೇಕ ಗಾನಾಮೃತ’ ಕಾರ್ಯಕ್ರಮ ವಿಶೇಷ ಮೆರುಗು ನೀಡಿತು.

