ಪ್ರಥಮ ಪಿಯುಸಿ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿ-ಪೋಷಕರ ಸಮಾವೇಶ
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿ-ಪೋಷಕರ ಸಮಾವೇಶ “ವಿವೇಕ ಸಂಕಲ್ಪ-2025” ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ ವಹಿಸಿದರು. ಪೋಷಕರನ್ನುದ್ದೇಶಿಸಿ ಮಾತನಾಡಿದ ಅವರು, 65 ವರ್ಷಗಳ ಇತಿಹಾಸವಿರುವ ವಿವೇಕಾನಂದ ಶಿಕ್ಷಣ ಸಂಸ್ಥೆಯ ಸ್ಥಾಪನೆಯ ಉದ್ದೇಶ ಭಾರತೀಯ ಸಂಸ್ಕೃತಿ , ಹಿಂದೂ ಜೀವನ ಮೌಲ್ಯಗಳನ್ನು ನಿರ್ಮಾಣ ಮಾಡುವುದಾಗಿದೆ. ಭವಿಷ್ಯದ ನಿರ್ಣಯ ತೆಗೆದುಕೊಳ್ಳುವಲ್ಲಿ ಪದವಿಪೂರ್ವ ಶಿಕ್ಷಣ ಹಂತವು ಪ್ರಮುಖ ಪಾತ್ರ ವಹಿಸುತ್ತದೆ. ತಮ್ಮ ಮಕ್ಕಳ ಉತ್ತಮ ವಿದ್ಯಾಭ್ಯಾಸಕ್ಕಾಗಿ ವಿವೇಕಾನಂದ ವಿದ್ಯಾಸಂಸ್ಥೆಯನ್ನು ಆರಿಸಿಕೊಂಡದ್ದಕ್ಕಾಗಿ ಈ ಸಂದರ್ಭದಲ್ಲಿ ಹೆತ್ತವರಿಗೆ ಅಭಿನಂದನೆಯನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಎಂ.ದೇವಿಚರಣ್ ರೈ ಕಾಲೇಜಿನ ದೈನಂದಿನ ಚಟುವಟಿಕೆಗಳ ಕುರಿತು, ಕಾಲೇಜು ಗಳಿಸಿದ ಫಲಿತಾಂಶ, ಒಟ್ಟು ತರಗತಿ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದರೆ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ದೇವಿಪ್ರಸಾದ್ ವಿದ್ಯಾರ್ಥಿಗಳು ಪಾಲಿಸಬೇಕಾದ ಶಿಸ್ತು , ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಸೌಲಭ್ಯಗಳು, ವಿದ್ಯಾರ್ಥಿಗಳು ಅದನ್ನು ಬಳಸಿಕೊಳ್ಳಬೇಕಾದ ರೀತಿ, ಬಡ ವಿದ್ಯಾರ್ಥಿಗಳಿಗಾಗಿ ಇರುವ ಉಚಿತ ಭೋಜನ ವ್ಯವಸ್ಥೆ, ವಿದ್ಯಾನಿಧಿ ಈ ಮೊದಲಾದ ವಿಚಾರಗಳ ಕುರಿತು ಹೆತ್ತವರಿಗೆ ಮಾಹಿತಿ ನೀಡಿದರು. ಕಾಲೇಜಿನಲ್ಲಿ ಲಭ್ಯವಿರುವ ಸಿ.ಎ ಪ್ರವೇಶ ಪರೀಕ್ಷೆಗಳ ತರಬೇತಿ,ಐ.ಎ.ಸ್,ಐ.ಪಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಸಂಸ್ಥೆ ʼಯಶಸ್ʼ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ನಡೆಸಲಾಗುವ ಷೇರು ಮಾರುಕಟ್ಟೆ ಹಾಗೂ ಟ್ಯಾಲಿ ಸರ್ಟಿಫಿಕೇಟ್ ಕೋರ್ಸ್ ಗಳ ಕುರಿತಾದ ಮಾಹಿತಿಗಳನ್ನು ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ್ ಶೆಟ್ಟಿಗಾರ್ ನೀಡಿದರು. ವಸತಿನಿಲಯದ ಮುಖ್ಯ ನಿಯಮಪಾಲಕರಾದ ಚೇತನ್ ವಸತಿನಿಲಯದ ನಿಯಮಗಳ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರಾದ ವತ್ಸಲಾ ರಾಜ್ಞಿ, ಕೋಶಾಧಿಕಾರಿಗಳಾದ ಸಚಿನ್ ಶೆಣೈ, ಕಾಲೇಜಿನ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು.
ಸರಸ್ವತೀವಂದನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಕನ್ನಡ ಭಾಷಾ ವಿಭಾಗದ ಉಪನ್ಯಾಸಕಿ ಪುಷ್ಪಲತಾ ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಭಾಗ್ಯಶ್ರೀ ವಂದಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಯಶವಂತಿ ಡಿ ನಿರೂಪಿಸಿದರು.