ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ : ಶಾಸಕರಿಗೆ ಡಿಕೆಶಿ ಸೂಚನೆ

0
16

ಬೆಂಗಳೂರು : ಮಳೆಗಾಲದ ವಿಧಾನಮಂಡಲ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕರೊಂದಿಗೆ ಸರಣಿ ಸಭೆ ನಡೆಸಿ ಕ್ಷೇತ್ರಗಳ ಅಭಿವೃದ್ಧಿ, ಅನುದಾನ, ಬರ ಪರಿಸ್ಥಿತಿ, ಎಸ್‌ಐಆರ್ ಪ್ರಕ್ರಿಯೆ ಹಾಗೂ 2028ರ ವಿಧಾನಸಭಾ ಚುನಾವಣೆ ಸಿದ್ಧತೆ ಕುರಿತು ಮಹತ್ವದ ಚರ್ಚೆ ನಡೆಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸತತ ಏಳು ಗಂಟೆಗಳ ಕಾಲ ನಡೆದ ಸಭೆಯಲ್ಲಿ 27 ಜಿಲ್ಲೆಗಳ ಶಾಸಕರನ್ನು ಬ್ಯಾಚ್‌ವಾರು ಕರೆದು ಕ್ಷೇತ್ರವಾರು ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ, ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಹಲವು ಸೂಚನೆಗಳನ್ನು ನೀಡಿದರು.

ಮೊದಲ ಹಂತದಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಶಾಸಕರೊಂದಿಗೆ ಸಭೆ ನಡೆಯಿತು. ಬಳಿಕ ಬೀದರ್, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಉತ್ತರ ಕನ್ನಡ, ಹಾವೇರಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಶಾಸಕರೊಂದಿಗೆ ಚರ್ಚಿಸಲಾಯಿತು.

ನಂತರ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಶಾಸಕರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿದರು.

ಕ್ಷೇತ್ರಗಳಲ್ಲಿ ಕುಡಿಯುವ ನೀರು, ರಸ್ತೆ, ಮೂಲಸೌಕರ್ಯ, ವಸತಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಶಾಸಕರು ತಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಮುಂದಿಟ್ಟರು. ಕೆಲ ಶಾಸಕರು ಅನುದಾನದ ಕೊರತೆಯ ಬಗ್ಗೆಯೂ ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಸಿಎಂ, ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನದ ಕೊರತೆ ಉಂಟಾಗದಂತೆ ಹಿರಿಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ರಾಜ್ಯದ ಬರ ಪರಿಸ್ಥಿತಿಯೂ ಪ್ರಮುಖವಾಗಿ ಚರ್ಚೆಯಾಯಿತು. 102 ತಾಲೂಕುಗಳಲ್ಲಿ ತೀವ್ರ ಸ್ವರೂಪದ ಬರ ಪರಿಸ್ಥಿತಿ ಇದೆ ಎಂಬ ಮಾಹಿತಿ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರಿಂದ ಪರಿಸ್ಥಿತಿಯ ಕುರಿತು ವರದಿಗಳನ್ನು ಪಡೆಯಲಾಗುತ್ತಿದೆ. ಬರಪೀಡಿತ ತಾಲೂಕುಗಳ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವ ಬಗ್ಗೆಯೂ ಚರ್ಚೆ ನಡೆದಿದೆ. ಅಗತ್ಯವಿರುವ ಪ್ರದೇಶಗಳಿಗೆ ಸ್ವತಃ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಬಗ್ಗೆಯೂ ಶಾಸಕರಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು. ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದು, ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುವಂತೆ ಶಾಸಕರಿಗೆ ತಿಳಿಸಿದರು.

ಇದರೊಂದಿಗೆ ಅಭಿವೃದ್ಧಿ ಕಾರ್ಯಗಳ ಜತೆಗೆ ಪಕ್ಷ ಸಂಘಟನೆಗೂ ಹೆಚ್ಚಿನ ಒತ್ತು ನೀಡುವಂತೆ ಶಾಸಕರಿಗೆ ಸೂಚಿಸಲಾಗಿದೆ. ಸಚಿವರು ತಾಲೂಕು ಮಟ್ಟದಲ್ಲಿ ಪ್ರವಾಸ ಕೈಗೊಂಡು ಸರ್ಕಾರದ ಯೋಜನೆಗಳ ಅನುಷ್ಠಾನವನ್ನು ಪರಿಶೀಲಿಸುವುದರ ಜೊತೆಗೆ ಪಕ್ಷದ ಸಂಘಟನೆಯನ್ನು ಬಲಪಡಿಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದ್ದು, ಪ್ರತಿ ಸಮಿತಿಗೆ ಆರು ಸದಸ್ಯರನ್ನು ನೇಮಿಸುವ ಪ್ರಸ್ತಾಪವಿದೆ. ಯುವಜನರನ್ನು ಸಂಘಟಿಸುವ ನಿಟ್ಟಿನಲ್ಲಿ ‘ಭಾರತ್ ಜೋಡೋ ಯುವ ಸಂಘ’ ಸ್ಥಾಪನೆಗೆ ಶಾಸಕರು ಮುಂದಾಳತ್ವ ವಹಿಸುವಂತೆ ಹಾಗೂ ‘ಭಾರತ್ ಜೋಡೋ ಸಂಘ’ಕ್ಕೆ ಅರ್ಹ ವ್ಯಕ್ತಿಗಳ ಹೆಸರುಗಳನ್ನು ಶಿಫಾರಸು ಮಾಡುವಂತೆ ಸೂಚಿಸಲಾಗಿದೆ.

2028ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಿನಿಂದಲೇ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ, ಸರ್ಕಾರದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಜನರೊಂದಿಗೆ ನಿರಂತರ ಸಂಪರ್ಕಕ್ಕೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಶಾಸಕರಿಗೆ ಸೂಚಿಸಿರುವುದು ಸಭೆಯ ಪ್ರಮುಖ ಅಂಶವಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜಿಲ್ಲಾ ಶಾಸಕರೊಂದಿಗಿನ ಸಭೆ ಇಂದು ಕೂಡ ಮುಂದುವರಿಯಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳ ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಯಲಿದೆ. ಬಳಿಕ ವಿಧಾನಪರಿಷತ್ ಸದಸ್ಯರೊಂದಿಗೂ ಮುಖ್ಯಮಂತ್ರಿ ಸಭೆ ನಡೆಸಲಿದ್ದಾರೆ.