ಎಡೆಬಿಡದ ಮಳೆಗೆ ವಯನಾಡ್ ತತ್ತರ – ಮಣ್ಣಿನಡಿ ಕಾರ್ಮಿಕರು ಸಿಲುಕಿರುವ ಶಂಕೆ

0
14

ವಯನಾಡ್ : ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಭೀಕರ ಭೂಕುಸಿತ ಸಂಭವಿಸಿದೆ. ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಹೆದ್ದಾರಿಯ ಕಲ್ಲಾಡಿ ಬಳಿಯ ಮೀನಾಕ್ಷಿ ಸೇತುವೆ ಸಮೀಪ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಭೂಕುಸಿತದಿಂದ ಪ್ರವಾಸಿಗರಿಗಾಗಿ ನಿರ್ಮಿಸಿದ್ದ ಹೋಂಸ್ಟೇಗಳು ಹಾಗೂ ಆನಕ್ಕಂಪೋಯಿಲ್–ಮೇಪ್ಪಾಡಿ ಸುರಂಗ ಮಾರ್ಗ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರು ತಂಗಿದ್ದ ವಸತಿ ಪ್ರದೇಶದ ಮೇಲೆ ಮಣ್ಣು ಕುಸಿದು ಬಿದ್ದಿದೆ. ಘಟನೆ ಸಂಭವಿಸಿದ ವೇಳೆ ಕಾಮಗಾರಿ ನಡೆಯುತ್ತಿದ್ದ ಕಾರಣ ಹಲವಾರು ಕಾರ್ಮಿಕರು ಸ್ಥಳದಲ್ಲಿದ್ದರೆಂದು ಶಂಕಿಸಲಾಗಿದ್ದು, ಕೆಲವರು ಮಣ್ಣಿನಡಿ ಸಿಲುಕಿರುವ ಆತಂಕ ವ್ಯಕ್ತವಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ತಕ್ಷಣ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದ್ದು, ಮಣ್ಣಿನಡಿ ಸಿಲುಕಿದ್ದ ಇಬ್ಬರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಗಾಯಗೊಂಡ ಐವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅದೃಷ್ಟವಶಾತ್, ಈವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಆದರೆ ಕಾರ್ಮಿಕರನ್ನು ಕರೆತರಲು ನಿಲ್ಲಿಸಿದ್ದ ಹಲವು ವಾಹನಗಳು ಮಣ್ಣಿನಡಿ ಸಿಲುಕಿ ಸಂಪೂರ್ಣ ಜಖಂಗೊಂಡಿವೆ.

ಭೂಕುಸಿತದ ಬಳಿಕ ಪೊಲೀಸರು, ಅಗ್ನಿಶಾಮಕ ದಳ, ವಿಪತ್ತು ನಿರ್ವಹಣಾ ತಂಡ ಹಾಗೂ ಸ್ಥಳೀಯ ಆಡಳಿತದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಮಳೆ ಇನ್ನೂ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಸಾರ್ವಜನಿಕರು ಅನಗತ್ಯವಾಗಿ ಅಪಾಯದ ಪ್ರದೇಶಗಳಿಗೆ ತೆರಳದಂತೆ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here