ನವದೆಹಲಿ : ಭಾರತದಲ್ಲಿ ಜೂನ್ 21ರಂದು ನಡೆಯಲಿರುವ ನೀಟ್ ಯುಜಿ (NEET-UG 2026) ಮರು ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಮ್ ಆ್ಯಪ್‌ಗೆ ವಿಧಿಸಲಾಗಿರುವ ತಾತ್ಕಾಲಿಕ ನಿರ್ಬಂಧವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.
ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ನೇತೃತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ಪ್ರಕರಣದ ತುರ್ತು ವಿಚಾರಣೆಗೆ ನ್ಯಾಯಾಲಯ ಒಪ್ಪಿಗೆ ಸೂಚಿಸಿದೆ. ಈ ಕುರಿತು ಇಂದು ಮುಂದಿನ ಹಂತದ ವಿಚಾರಣೆ ನಡೆಯುವ ಸಾಧ್ಯತೆ ಇದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ (CBI) ನಡೆಸುತ್ತಿದ್ದು, ಈ ಹಿಂದೆ ಪ್ರಶ್ನೆಪತ್ರಿಕೆಗಳನ್ನು ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್‌ಗಳ ಮೂಲಕ ಪಿಡಿಎಫ್ ರೂಪದಲ್ಲಿ ಹಂಚಿಕೊಳ್ಳಲಾಗಿತ್ತು ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು.
ಮುಂಬರುವ ಮರು ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಭದ್ರತಾ ಲೋಪಗಳು ನಡೆಯದಂತೆ ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಮ್ ಸೇವೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಸರ್ಕಾರದ ಈ ಕ್ರಮದ ವಿರುದ್ಧ ಟೆಲಿಗ್ರಾಮ್ ನ್ಯಾಯಾಲಯದ ಮೊರೆ ಹೋಗಿದ್ದು, ನಿರ್ಬಂಧ ತೆರವುಗೊಳಿಸುವಂತೆ ಮನವಿ ಮಾಡಿದೆ.
ಇನ್ನೊಂದೆಡೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಕೇಂದ್ರ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ 2020ರ ಸೆಕ್ಷನ್ 69A ಅಡಿಯಲ್ಲಿ ದೇಶದ ಹಿತದೃಷ್ಟಿಯಿಂದ ಸೀಮಿತ ಅವಧಿಗೆ ಮಾತ್ರ ಈ ನಿರ್ಬಂಧ ಜಾರಿಗೊಳಿಸಲಾಗಿದೆ ಎಂದು ಎನ್‌ಟಿಎ ಸ್ಪಷ್ಟಪಡಿಸಿದೆ.
ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಯ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ಹೇಳಿದೆ.
ಇತ್ತೀಚಿನ ವಾರಗಳಲ್ಲಿ ಟೆಲಿಗ್ರಾಮ್‌ನಲ್ಲಿ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದ ಹಲವಾರು ಚಾನೆಲ್‌ಗಳು ಸಕ್ರಿಯವಾಗಿದ್ದವು ಎಂದು ಶಿಕ್ಷಣ ಸಚಿವಾಲಯ ಹಾಗೂ ಎನ್‌ಟಿಎ ನ್ಯಾಯಾಲಯದ ಗಮನಕ್ಕೆ ತಂದಿವೆ. “ಪೇಪರ್ ಲೀಕ್ಡ್ ನೀಟ್”, “ರೀ-ನೀಟ್ 2026”, “ರೀ ನೀಟ್ ಮಾಫಿಯಾ” ಮುಂತಾದ ಹೆಸರುಗಳಡಿ ಕಾರ್ಯನಿರ್ವಹಿಸುತ್ತಿದ್ದ ಕೆಲವು ಚಾನೆಲ್‌ಗಳು ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಸುತ್ತಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮರು ಪರೀಕ್ಷೆಯ ಸಂದರ್ಭದಲ್ಲಿ ಸುಳ್ಳು ಮಾಹಿತಿ, ವದಂತಿ ಹಾಗೂ ಅಕ್ರಮ ಚಟುವಟಿಕೆಗಳನ್ನು ತಡೆಯಲು ತಾತ್ಕಾಲಿಕ ನಿರ್ಬಂಧ ಅನಿವಾರ್ಯವಾಗಿತ್ತು ಎಂದು ಕೇಂದ್ರ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದೆ.
ಈ ನಡುವೆ ಟೆಲಿಗ್ರಾಮ್ ಸಂಸ್ಥೆಯ ಅರ್ಜಿಯ ವಿಚಾರಣೆ ಇಂದು ನಡೆಯಲಿದ್ದು, ದೆಹಲಿ ಹೈಕೋರ್ಟ್ ಯಾವ ತೀರ್ಪು ನೀಡಲಿದೆ ಎಂಬುದರತ್ತ ಎಲ್ಲರ ಚಿತ್ತ ನೆಟ್ಟಿದೆ.

