ಯುವತಿಯೊಬ್ಬಳು ತನ್ನ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಕೆ.ಜಿ. ಶ್ರೀನಿವಾಸಪುರ ಗ್ರಾಮದ ಬಳಿ ಈ ಮನಕಲಕುವ ಘಟನೆ ನಡೆದಿದೆ.
ಯುವತಿ ಸ್ನಾನದ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಹಾಗೂ ದುಃಖದ ವಾತಾವರಣವನ್ನು ಉಂಟುಮಾಡಿದೆ.
ಮೃತ ಯುವತಿಯನ್ನು ಯಶಸ್ವಿನಿ (22) ಎಂದು ಗುರುತಿಸಲಾಗಿದೆ. ಅವರು ಕಳೆದ ಐದು ತಿಂಗಳಿಂದ ದೊಡ್ಡಬಳ್ಳಾಪುರದಲ್ಲಿರುವ ಆಯಪಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಮಾಹಿತಿ ಪ್ರಕಾರ, ಯಶಸ್ವಿನಿ ಮನೆಯಿಂದ ಹೊರಗೆ ಇರುವ ಸ್ನಾನದ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಬೆಂಕಿ ತೀವ್ರವಾಗಿ ಹೊತ್ತಿಕೊಂಡಿದ್ದರಿಂದ ಅವರು ಗಂಭೀರವಾಗಿ ಸುಟ್ಟು ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ದುರ್ಘಟನೆ ಕಂಡು ಕುಟುಂಬಸ್ಥರು ಹಾಗೂ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಈ ಘಟನೆಯ ಮುನ್ನ ಯಶಸ್ವಿನಿ ದಾಬಸ್ ಪೇಟೆಯ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಖರೀದಿಸಿದ್ದಾಳೆ ಎಂಬುದು ತಿಳಿದುಬಂದಿದೆ. ಪೆಟ್ರೋಲ್ ಖರೀದಿಸಿದ ದೃಶ್ಯಗಳು ಅಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರಿಂದ ಆತ್ಮಹತ್ಯೆಗೆ ಮೊದಲೇ ನಿರ್ಧಾರ ಮಾಡಿದ್ದಳು ಎಂಬುದು ಬಯಲಾಗಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ದಾಬಸ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಎಲ್ಲಾ ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ. ಈ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಪ್ರಸ್ತುತ ತನಿಖೆಯಲ್ಲಿ ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಕುಟುಂಬದವರಿಂದ ಹಾಗೂ ಪರಿಚಿತರರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕೆಲಸದ ಒತ್ತಡವೇ ಕಾರಣವೋ, ವೈಯಕ್ತಿಕ ಸಮಸ್ಯೆಗಳೋ ಅಥವಾ ಬೇರೆ ಯಾವುದೇ ಕಾರಣವಿದೆಯೋ ಎಂಬುದನ್ನು ಪೊಲೀಸರು ವಿವಿಧ ಕೋಣಗಳಿಂದ ಪರಿಶೀಲಿಸುತ್ತಿದ್ದಾರೆ.
ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರೆಸಿದ್ದು, ಮುಂದಿನ ದಿನಗಳಲ್ಲಿ ನಿಖರ ಕಾರಣ ತಿಳಿಯುವ ನಿರೀಕ್ಷೆಯಿದೆ. ಈ ನಡುವೆ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ.

