ಮಂಗಳೂರು : ಅಪಾರ್ಟ್‌ಮೆಂಟ್‌ನ ಲಿಫ್ಟ್‌ನಲ್ಲಿ ಸಿಲುಕಿಕೊಂಡು ಹೊರಬರಲಾಗದೆ ಸಂಕಷ್ಟಕ್ಕೊಳಗಾಗಿದ್ದ ಅಸ್ಸಾಂ ಮೂಲದ 33 ವರ್ಷದ ಯುವಕನನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ತ್ವರಿತ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಮಂಗಳೂರಿನ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ಕಾಲೇಜಿನ ಮುಂಭಾಗ, ರೈಲ್ವೆ ಟ್ರ್ಯಾಕ್ ಸಮೀಪದ ಮಿಜಾರ್ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. ಅಸ್ಸಾಂ ಮೂಲದ ಕೇಶವ್ (33) ಎಂಬವರು ಲಿಫ್ಟ್‌ನಲ್ಲಿ ತೆರಳುತ್ತಿದ್ದ ವೇಳೆ ಗ್ರೌಂಡ್ ಫ್ಲೋರ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿ ಲಿಫ್ಟ್ ಏಕಾಏಕಿ ಸ್ಥಗಿತಗೊಂಡಿದೆ. ಇದರಿಂದ ಕೇಶವ್ ಲಿಫ್ಟ್‌ನೊಳಗೆ ಸಿಲುಕಿಕೊಂಡು ಆತಂಕಕ್ಕೊಳಗಾಗಿದ್ದರು.
ಲಿಫ್ಟ್‌ನೊಳಗೆ ವ್ಯಕ್ತಿಯೊಬ್ಬರು ಸಿಲುಕಿಕೊಂಡಿರುವ ಮಾಹಿತಿ ಲಭಿಸಿದ ತಕ್ಷಣ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಯಾವುದೇ ವಿಳಂಬ ಮಾಡದೆ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ ಸಿಬ್ಬಂದಿ, ಲಿಫ್ಟ್‌ನ ತಾಂತ್ರಿಕ ಸ್ಥಿತಿಯನ್ನು ಪರಿಶೀಲಿಸಿದ್ದಾರೆ.
ಹಳೆಯ ಮಾದರಿಯ ಲಿಫ್ಟ್ ಆಗಿದ್ದ ಕಾರಣ ಸಾಮಾನ್ಯ ಕೀ ಬಳಸಿ ಬಾಗಿಲು ತೆರೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ಅಗ್ನಿಶಾಮಕ ಸಿಬ್ಬಂದಿ ಹೈಡ್ರಾಲಿಕ್ ಸ್ಪ್ರೆಡರ್ ಉಪಕರಣ ಬಳಸಿ ಲಿಫ್ಟ್‌ನ ಬಾಗಿಲನ್ನು ತೆರೆಯುವ ಮೂಲಕ ಒಳಗೆ ಸಿಲುಕಿದ್ದ ಕೇಶವ್ ಅವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯಿಂದ ಯಾವುದೇ ಅಪಾಯವಾಗದೆ ಯುವಕನನ್ನು ರಕ್ಷಿಸಲಾಗಿದ್ದು, ಸ್ಥಳೀಯರು ಸಿಬ್ಬಂದಿಯ ಸಮಯಪ್ರಜ್ಞೆ ಹಾಗೂ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಲಿಫ್ಟ್‌ನಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಸಂಬಂಧಪಟ್ಟವರು ಲಿಫ್ಟ್‌ನ ಸುರಕ್ಷತಾ ವ್ಯವಸ್ಥೆ ಹಾಗೂ ತಾಂತ್ರಿಕ ಸ್ಥಿತಿಯನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

