ಉಡುಪಿ: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮನುಷ್ಯನ ದೇಹ ದೈಹಿಕವಾಗಿ ಮತ್ತು ಮಾನಸಿಕವಾಗಿ ಕ್ರಿಯಾಶೀಲರಾಗಿರುವುದರೊಂದಿಗೆ ಸದೃಢ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ. ಯುವ ಜನರು ಕ್ರೀಡೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ, ಸದೃಢ ಆರೋಗ್ಯ ಹೊಂದಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು.
ಶುಕ್ರವಾರ ತೆಂಕನಿಡಿಯೂರು ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಲಯನ್ಸ್ ಕ್ಲಬ್ ಉಡುಪಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ನಡೆದ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ, ಮೇಜರ್ ಧ್ಯಾನ್ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮಾತನಾಡುತ್ತಿದ್ದರು.
ವೈವಿಧ್ಯತೆಯಲ್ಲಿ ಏಕತೆ ಹೊಂದಿರುವ ನಮ್ಮ ದೇಶದಲ್ಲಿ ದೇಶಪ್ರೇಮದ ಮನೋಭಾವ ನಮ್ಮ ಯುವಜನರಲ್ಲಿ ಹೆಚ್ಚಿದೆ. ಇದು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಫಿಟ್ ಇಂಡಿಯಾ ಪ್ರತಿಜ್ಞಾ ವಿಧಿ ಬೋಧಿಸಿ, ಮಾತನಾಡಿ, ಹಾಕಿ ಕ್ರೀಡಾಪಟು ಮೇಜರ್ ಧ್ಯಾನ್ಚಂದ್ ಅವರ ಹುಟ್ಟುಹಬ್ಬದ ಸ್ಮರಣಾರ್ಥವಾಗಿ ಕ್ರೀಡಾ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದೆ. ಇಂದಿನ ಯುವಪೀಳಿಗೆ ಕಲಿಕೆಯ ಜೊತೆಜೊತೆಗೆ ಕ್ರೀಡಾ ಮನೋಭಾವ, ಸಂಯಮ, ಆತ್ಮವಿಶ್ವಾಸ, ದೃಢನಿರ್ಧಾರವನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಆಗ ಮಾತ್ರ ಜೀವನದಲ್ಲಿ ಉತ್ತಮ ಸ್ಥಾನವನ್ನು ಅಲಂಕರಿಸಲು ಸಾಧ್ಯವಾಗುತ್ತದೆ ಎಂದ ಅವರು, ಜಿಲ್ಲೆಯಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಜನಪ್ರತಿನಿಧಿಗಳು ಸಾಕಷ್ಟು ಪ್ರೋತ್ಸಾಹ ನೀಡುತ್ತಿದ್ದು, ಇದರ ಸದ್ಬಳಕೆಯನ್ನು ಪ್ರತಿಯೊಬ್ಬ ಕ್ರೀಡಾಪಟುಗಳು ಪಡೆದುಕೊಳ್ಳಬೇಕು ಎಂದರು.
ರೆಡ್ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಅಧ್ಯಕ್ಷ ಡಾ. ಜಯಕರ ಶೆಟ್ಟಿ ರಕ್ತದಾನದ ಮಹತ್ವದ ಕುರಿತು ಮಾತನಾಡಿದರು.
ಶಾಸಕ ಯಶ್ಪಾಲ್ ಎ ಸುವರ್ಣ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಸಂಸದ್ ಖೇಲ್ ಮಹೋತ್ಸವ್ ವೆಬ್ಸೈಟ್ ಅನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು, ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ದಿನೇಶ್ ಕಿಣಿ, ತೆಂಕನಿಡಿಯೂರು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಗಣೇಶ್ ಪ್ರಸಾದ್, ಕಾಲೇಜಿನ ಅಧ್ಯಾಪಕ ವೃಂದದವರು, ವಿದ್ಯಾರ್ಥಿಗಳು, ಕುಂದಾಪುರ ರಕ್ತನಿಧಿ ಕೇಂದ್ರದ ವೈದ್ಯಕೀಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಾಲೇಜಿನ ರೆಡ್ಕ್ರಾಸ್ ಘಟಕದ ಸಂಚಾಲಕ ಪ್ರಶಾಂತ್ ನೀಲಾವರ ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿ, ವಂದಿಸಿದರು.