ಮನೆಯಿಂದ ಹೋದ ಯುವಕ ಕೋಟಿತೀರ್ಥದಲ್ಲಿ ಮೃತದೇಹವಾಗಿ ಪತ್ತೆ

0
28

ಕುಂದಾಪುರ : ಕೋಟೇಶ್ವರದ ಪ್ರಸಿದ್ಧ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಬುಧವಾರ ಬೆಳಗ್ಗೆ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಲಾಗಿದೆ.

ಕೋಟೇಶ್ವರ ಸಮೀಪದ ಹೊದ್ರಾಳಿ ಕೊಳನಕಟ್ಟೆ ನಿವಾಸಿ ಮಹಾಬಲ ಆಚಾರ್ಯ ಅವರ ಪುತ್ರ ಪದ್ಮನಾಭ ಆಚಾರ್ಯ (37) ಮೃತ ಯುವಕ. ಅವರು ಕುಂದಾಪುರದ ಹೆಂಚಿನ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ನಾಲ್ಕು ತಿಂಗಳಿನಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಇದ್ದರು ಎಂದು ತಿಳಿದುಬಂದಿದೆ.

ಮಂಗಳವಾರ ಬೆಳಗ್ಗೆ ಮನೆಯಿಂದ ಹೊರಟಿದ್ದ ಪದ್ಮನಾಭ ಅವರು ರಾತ್ರಿ ಕಳೆದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಕೋಟೇಶ್ವರ ದೇವಸ್ಥಾನದ ಸಮೀಪ ಅವರ ದ್ವಿಚಕ್ರ ವಾಹನ ಪತ್ತೆಯಾಗಿದೆ.

ಬಳಿಕ ಕೋಟಿತೀರ್ಥ ಪುಷ್ಕರಣಿಯ ಪೂರ್ವ ಭಾಗದ ಮೆಟ್ಟಿಲ ಬಳಿ ಅವರ ಚಪ್ಪಲಿ ಹಾಗೂ ಟೋಪಿ ಪತ್ತೆಯಾಗಿದ್ದು, ಅವರು ಪುಷ್ಕರಣಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.

ಶೋಧ ಕಾರ್ಯಾಚರಣೆ: ಬುಧವಾರ ಬೆಳಗ್ಗಿನಿಂದಲೇ ಕೋಟಿತೀರ್ಥ ಪುಷ್ಕರಣಿಯಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಯಿತು. ಕೆರೆಯಲ್ಲಿ ನಿತ್ಯ ಈಜಾಡುವ ಸ್ಥಳೀಯರಾದ ಸುಧೀರ್ ಕುಮಾರ್ ಶೆಟ್ಟಿ, ಪ್ರಭಾಕರ್ ಶೆಟ್ಟಿ ಹಾಗೂ ಸತ್ಯನಾರಾಯಣ ಮಂಜ ಸೇರಿದಂತೆ ಹಲವರು ಬೋಟ್ ಸಹಾಯದಿಂದ ಶೋಧ ನಡೆಸಿದರು. ಬೆಳಗ್ಗೆ ಸುಮಾರು 9 ಗಂಟೆಯ ವೇಳೆಗೆ ನೀರಿನಲ್ಲಿದ್ದ ಮೃತದೇಹ ಪತ್ತೆಯಾಯಿತು.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪ್ರಸಿದ್ಧ ಮುಳುಗುತಜ್ಞ ಈಶ್ವರ ಮಲ್ಪೆ ಹಾಗೂ ಅವರ ತಂಡ ಸ್ಥಳೀಯ ಈಜುಗಾರರ ನೆರವಿನೊಂದಿಗೆ ನೀರಿಗಿಳಿದು ಮೃತದೇಹವನ್ನು ಮೇಲಕ್ಕೆತ್ತಿದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.